ಸಿದ್ದರಾಮಯ್ಯ
ಬೆಂಗಳೂರು: ‘ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಒಳಮೀಸಲಾತಿ ಜಾರಿಗೆ ದೃಢ ಹೆಜ್ಜೆ ಇಟ್ಟಿದ್ದೇವೆ. ಪರಿಶಿಷ್ಟ ಜಾತಿಗಳ ನಿಖರ ದತ್ತಾಂಶ ಸಂಗ್ರಹ ಕಾರ್ಯ ಆರಂಭವಾಗಿದ್ದು, ಎರಡು ತಿಂಗಳಲ್ಲಿ ವರದಿ ಪಡೆದು ಒಳ ಮೀಸಲಾತಿ ಜಾರಿಗೊಳಿಸಲಾಗುವುದು’ ಎಂದು ಸಿದ್ದರಾಮಯ್ಯ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗ ಪರಿಶಿಷ್ಟ ಜಾತಿಗಳ ಸಂಖ್ಯೆಯನ್ನು ಗುರುತಿಸಿತ್ತು. ಸುಪ್ರೀಂ ಕೋರ್ಟ್ ಆದೇಶದ ನಂತರ ಒಳ ಮೀಸಲಾತಿ ಅನುಷ್ಠಾನಕ್ಕಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಆಯೋಗದ ಮಧ್ಯಂತರ ಶಿಫಾರಸಿನಂತೆ ಪರಿಶಿಷ್ಟರಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣಕ್ಕಾಗಿ ನಿಖರ ಮಾಹಿತಿ ಕಲೆ ಹಾಕಲಾಗುತ್ತಿದೆ. ಮೂರು ಹಂತಗಳಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ’ ಎಂದರು.
‘ಪರಿಶಿಷ್ಟರಲ್ಲಿನ ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ ಜಾತಿಗಳಲ್ಲಿನ ಎಡ, ಬಲದವರನ್ನು ನಿಖರವಾಗಿ ಗುರುತಿಸಬೇಕಿದೆ. ಅಂಥವರು ತಮ್ಮ ಉಪ ಜಾತಿಯನ್ನೂ ಕಡ್ಡಾಯವಾಗಿ ನಮೂದಿಸಬೇಕು. 46 ಪ್ರಶ್ನೆಗಳು ಮತ್ತು ಉಪ ಪ್ರಶ್ನೆಗಳನ್ನು ಒಳಗೊಂಡ ಪ್ರಶ್ನಾವಳಿಗಳ ಕೈಪಿಡಿ ಸಿದ್ಧಪಡಿಸಲಾಗಿದೆ. ಈಗ ನಡೆಸುತ್ತಿರುವ ಸಮೀಕ್ಷೆ ಈ ಎಲ್ಲಾ ಗೊಂದಲಗಳಿಗೂ ಪರಿಹಾರ ನೀಡಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ನ್ಯಾ. ನಾಗಮೋಹನ್ ದಾಸ್ ಅಧ್ಯಕ್ಷತೆಯ ಆಯೋಗವು ಗಣತಿ ದತ್ತಾಂಶ ಆಧಾರಿಸಿ 60 ದಿನಗಳಲ್ಲಿ ಶಿಫಾರಸು ಮಾಡಲಿದೆ. ಮಾಡಿದ ತಕ್ಷಣ ಒಳಮೀಸಲಾತಿ ಜಾರಿಗೊಳಿಸಲಾಗುವುದು. ಎಲ್ಲ ಪರಿಶಿಷ್ಟ ಜಾತಿಯ ಜನರು ಸಮೀಕ್ಷೆಯಲ್ಲಿ ಭಾಗವಹಿಸಬೇಕು. ಖಚಿತ ಮಾಹಿತಿ ನೀಡಬೇಕು’ ಎಂದು ಕೋರಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ.ಎಚ್. ಮುನಿಯಪ್ಪ, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.