ADVERTISEMENT

ಪರಿಶಿಷ್ಟ ಜಾತಿ, ಪಂಗಡಗಳಿಗೆ ಮೀಸಲಿಟ್ಟ ಅನುದಾನದಲ್ಲಿ ₹500 ಕೋಟಿ ಲೂಟಿ: ಜಕ್ಕಪ್ಪ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2025, 14:33 IST
Last Updated 12 ಡಿಸೆಂಬರ್ 2025, 14:33 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ಸುವರ್ಣ ವಿಧಾನಸೌಧ (ಬೆಳಗಾವಿ): ‘ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ ಅನುದಾನದಲ್ಲಿ ಕಳೆದ 10 ವರ್ಷಗಳಲ್ಲಿ ಅಧಿಕಾರಿಗಳು ಕನಿಷ್ಠ ₹500 ಕೋಟಿ ಲೂಟಿ ಮಾಡಿದ್ದಾರೆ’ ಎಂದು ಕಾಂಗ್ರೆಸ್‌ ಸದಸ್ಯ ಎಫ್‌.ಎಚ್‌.ಜಕ್ಕಪ್ಪನವರ್‌ ಆರೋಪಿಸಿದರು.

ವಿಧಾನಪರಿಷತ್‌ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ‘ಪ್ರತಿ ವರ್ಷ ₹800 ಕೋಟಿಯಿಂದ ₹900 ಕೋಟಿ ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಡಲಾಗುತ್ತಿದೆ. ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಗಳ ಮೂಲಕ ಹಣವನ್ನು ಖರ್ಚು ಮಾಡಲಾಗುತ್ತದೆ. ಈ ಮೀಸಲು ನಿಧಿ ಬಳಸುವ ಮೊದಲು ವಿಶೇಷ ಗ್ರಾಮ ಸಭೆಗಳನ್ನು ಆಯೋಜಿಸಬೇಕು. ಪ್ರತ್ಯೇಕ ಗ್ರಾಮ ಸಭೆಗಳಲ್ಲಿ ರೂಪುಗೊಂಡ ಕ್ರಿಯಾ ಯೋಜನೆ ಪ್ರಕಾರವೇ ಮೀಸಲು ನಿಧಿಯನ್ನು ಬಳಸಬೇಕು. ಆದರೆ, ನಿಯಮದಂತೆ ಹಣ ಬಳಕೆಯಾಗಿಲ್ಲ’ ಎಂದು ದೂರಿದರು. 

ADVERTISEMENT

‘2016ರಿಂದ 2018ರವರೆಗೆ ಗ್ರಾಮ ಪಂಚಾಯಿತಿಗಳಲ್ಲಿ ಹಣ ಸದ್ಬಳಕೆಯಾಗಿತ್ತು. ನಂತರ ಬಂದ ಸರ್ಕಾರಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಲಿಲ್ಲ. ಇದರಿಂದ ಗ್ರಾಮೀಣ ಪ್ರದೇಶದ ಪರಿಶಿಷ್ಟರ ಬದುಕು ಹಸನಾಗಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.