ADVERTISEMENT

ಮೀಸಲಾತಿ ಹೆಚ್ಚಳಕ್ಕೆ ಅಸ್ತು- ಎಸ್‌ಸಿಗೆ ಶೇ 17, ಎಸ್‌ಟಿಗೆ ಶೇ 7

l ವರದಿ ಅಂಗೀಕಾರಕ್ಕೆ ಇಂದು ಸಂಪುಟ ಸಭೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2022, 20:57 IST
Last Updated 7 ಅಕ್ಟೋಬರ್ 2022, 20:57 IST
   

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌.ಸಿ)ಮತ್ತು ಪರಿಶಿಷ್ಟ ಪಂಗಡಗಳ (ಎಸ್‌.ಟಿ)ಮೀಸಲಾತಿ ಪ್ರಮಾಣವನ್ನು ಈ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಳ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ವಿಧಾನಮಂಡಲದ ಉಭಯ ಸದನಗಳ ವಿವಿಧ ಪಕ್ಷಗಳ ನಾಯಕರ ಸಭೆ ನಿರ್ಧರಿಸಿದೆ.

ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬೊಮ್ಮಾಯಿ, ‘ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡ 15ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ
ಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಈಸಂಬಂಧ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನದಾಸ್‌ ನೇತೃತ್ವದ ಆಯೋಗ ಸಲ್ಲಿಸಿರುವ ವರದಿಯನ್ನು ಶನಿವಾರ ನಡೆಯುವ ವಿಶೇಷ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗುವುದು’ ಎಂದರು.

‘ಒಳಮೀಸಲಿನ ಬಗ್ಗೆಯೂ ನಿರ್ಧಾರ’

ADVERTISEMENT

‘ಎಸ್‌.ಸಿ ಮತ್ತು ಎಸ್‌.ಟಿ ಸಮುದಾಯಗಳಿಗೆ ನೀಡಿರುವ ಮೀಸಲಾತಿ ಪ್ರಮಾಣ ಆ
ಸಮುದಾಯಗಳಲ್ಲಿನ ಕೆಲವರಿಗೆ ನ್ಯಾಯ ದೊರಕುತ್ತಿಲ್ಲ ಎಂಬ ದೂರುಗಳಿವೆ. ಈ ಬಗ್ಗೆಯೂ ಆಯೋಗದಿಂದ ವರದಿ ಬಂದಿದೆ. ಸಮಗ್ರವಾಗಿ ಅಧ್ಯಯನ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

ಹಿಂದುಳಿದ ವರ್ಗಗಳ ಪಟ್ಟಿಯ
ಲ್ಲಿನ ಮೀಸಲಾತಿ ಬಗ್ಗೆಯೂ ಹಲವು ಬೇಡಿಕೆಗಳಿವೆ. ಆ ಕುರಿತಂತೆಯೂ ಸಮಗ್ರವಾಗಿ ಚರ್ಚಿಸಿ ನ್ಯಾಯ ದೊರಕಿಸುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದರು.


ತುರ್ತು ಅಧಿವೇಶನಕ್ಕೆ ಆಗ್ರಹ

‘ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಬಹುದು. ಕೇಂದ್ರ ಸರ್ಕಾರವೇ ತೀರ್ಮಾನ ಕೈಗೊಂಡು, ಸಂವಿಧಾನ ತಿದ್ದುಪಡಿಯ ಮೂಲಕ ಅದಕ್ಕೆ ರಕ್ಷಣೆ ನೀಡಬೇಕು. ಈ ಸಂಬಂಧ ಒಕ್ಕೊರಲಿನ ನಿರ್ಣಯ ಕೈಗೊಳ್ಳಲು ತುರ್ತಾಗಿ ವಿಧಾನಮಂಡಲದ ಅಧಿವೇಶನ ಕರೆಯುವಂತೆ ಸರ್ಕಾರವನ್ನು ಆಗ್ರಹಿಸಿದ್ದೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

‘ಮೀಸಲಾತಿ ಹೆಚ್ಚಳದ ತೀರ್ಮಾನವನ್ನು ಸಂವಿಧಾನದ 9ನೇ ಪರಿಚ್ಛೇದದ ವ್ಯಾಪ್ತಿಗೆ ತರಬೇಕು. ಇದಕ್ಕಾಗಿ ಸಂವಿಧಾನ ತಿದ್ದುಪಡಿ ಮಾಡಬೇಕು. ಈಗಾಗಲೇ ಸಾಕಷ್ಟು ವಿಳಂಬವಾಗಿದೆ. ಕೇಂದ್ರ ಹಾಗೂ ರಾಜ್ಯ ಎರಡೂ ಕಡೆಗಳಲ್ಲಿ ಬಿಜೆಪಿ ಸರ್ಕಾರವಿದೆ. ಇನ್ನು ತಡವಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.


ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲೂ ನಿರ್ಣಯ

ಬೆಂಗಳೂರು: ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ 7 ಕ್ಕೆ ಹೆಚ್ಚಿಸಲು ಶುಕ್ರವಾರ ಬೆಳಿಗ್ಗೆ ನಡೆದ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಯಿತು.

‘ಈ ಐತಿಹಾಸಿಕ ನಿರ್ಣಯಕ್ಕೆ ಕೂಡಲೇ ಒಪ್ಪಿಗೆ ನೀಡಿ ಜಾರಿಗೆ ತರಬೇಕು’ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಸಮಿತಿ ಮನವಿ ಮಾಡಿತು. ಬಳಿಕ ನಡೆದ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಬೊಮ್ಮಾಯಿ, ಸರ್ವ ಪಕ್ಷಗಳ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಿ, ಮೀಸಲಾತಿ ಹೆಚ್ಚಳ ಪ್ರಕಟಿಸುವುದಾಗಿ ಭರವಸೆ ನೀಡಿದರು. ಕಾರ್ಯಕಾರಿಣಿ ಸದಸ್ಯರು ಎದ್ದು ನಿಂತು ಒಪ್ಪಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.