ನವದೆಹಲಿ: ಜಿಲ್ಲಾ ಪಂಚಾಯ್ತಿ ಮತ್ತು ಇತರ ಇಲಾಖೆಗಳ ನೌಕರರನ್ನು ಕಾಯಂಗೊಳಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಇತರ ಹಿರಿಯ ಅಧಿಕಾರಿಗಳ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಗುರುವಾರ ತಡೆನೀಡಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಹಿಮಾ ಕೋಹ್ಲಿ ಅವರಿದ್ದ ಪೀಠ ವಿಚಾರಣೆ ನಡೆಸಿತು.
ಉಮಾದೇವಿ ತೀರ್ಪನ್ನು ಪಾಲಿಸದ ಕಾರಣ ಮುಖ್ಯ ಕಾರ್ಯದರ್ಶಿ ಸೇರಿದಂತೆ 15 ಹಿರಿಯ ಅಧಿಕಾರಿಗಳು ನ್ಯಾಯಾಂಗ ನಿಂದನೆ ವಿಚಾರಣೆ ಎದುರಿಸಲು ಗುರುವಾರ ಖುದ್ದಾಗಿ ಹಾಜರಾಗಬೇಕು ಎಂದು ಕರ್ನಾಟಕ ಹೈಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು.
ಹೈಕೋರ್ಟ್ ನೀಡಿದ್ದ ಸಮನ್ಸ್ ವಿರುದ್ಧ ಕರ್ನಾಟಕ ಸರ್ಕಾರ ಬುಧವಾರ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ತುರ್ತು ವಿಚಾರಣೆಗೆ ಕೋರಿತ್ತು.
10ರಿಂದ 20 ವರ್ಷಗಳವರೆಗೆ ಸೇವೆ ಸಲ್ಲಿಸಿರುವ ದಿನಗೂಲಿ ನೌಕರರನ್ನು ಕಾಯಂಗೊಳಿಸಲು ತೆಗೆದುಕೊಂಡ ಕ್ರಮಗಳ ವಿವರಗಳನ್ನು ಒಳಗೊಂಡ ಪ್ರಮಾಣ ಪತ್ರ ಸಲ್ಲಿಸುವಂತೆ ಸುಪ್ರೀಂಕೋರ್ಟ್, ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿತು. ಸೇವೆಯನ್ನು ಕಾಯಂಗೊಳಿಸುವಂತೆ ದಿನಗೂಲಿ ನೌಕರರು ಸಲ್ಲಿಸಿದ್ದ ಮನವಿಯನ್ನು ಸರ್ಕಾರ ಏಕೆ ತಿರಸ್ಕರಿಸಿದೆ ಎಂಬುದಕ್ಕೆ ಸ್ಪಷ್ಟನೆ ನೀಡುವಂತೆ ಪೀಠ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.