ADVERTISEMENT

ನಿಮ್ಮ ಪರಿಸ್ಥಿತಿ ಅರ್ಥವಾಗಿದೆ: ಎಚ್‌ಡಿಕೆಗೆ ಸುಪ್ರೀಂ ಕೋರ್ಟ್

ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ನ್ಯಾಯಪೀಠ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2025, 0:30 IST
Last Updated 29 ಮಾರ್ಚ್ 2025, 0:30 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿಯ ಜಮೀನನ್ನು ಕಳೆದುಕೊಳ್ಳುವ ಆತಂಕ ಎದುರಿಸುತ್ತಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಸುಪ್ರೀಂ ಕೋರ್ಟ್, ‘ನಿಮ್ಮ ಪರಿಸ್ಥಿತಿ ಅರ್ಥವಾಗಿದೆ. ರಾಜ್ಯದಲ್ಲಿ ಸರ್ಕಾರ ಬದಲಾವಣೆ ಆಗಿರುವುದೇ ಇದಕ್ಕೆಲ್ಲಾ ಕಾರಣ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. 

ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಮತ್ತು ಎಸ್‌.ವಿ.ಎನ್‌ ಭಟ್ಟಿ ಅವರಿದ್ದ ವಿಭಾಗೀಯ ಪೀಠವು, ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಯನ್ನು ಹೈಕೋರ್ಟ್‌ನಲ್ಲಿ ಸಲ್ಲಿಸುವಂತೆ ಕುಮಾರಸ್ವಾಮಿ ಪರ ವಕೀಲರಿಗೆ ಸೂಚಿಸಿತು.

ನ್ಯಾಯಾಂಗ ಅರ್ಜಿಯಲ್ಲಿ ತಾನು ಪ್ರತಿವಾದಿಯಲ್ಲದೇ ಇದ್ದರೂ ಕೂಡ, ವಿಚಾರಣೆಗಳಲ್ಲಿ ನೀಡಿರುವ ತೀರ್ಪುಗಳಿಂದ, ತನ್ನ ಜಾಗದ ವಿರುದ್ಧ ತೆರವು ಆದೇಶಗಳನ್ನು ಹೊರಡಿಸಲಾಗುತ್ತಿದೆ ಮತ್ತು ತಾನು ಜಾಗದ ತೆರವಿನ ಭೀತಿ ಎದುರಿಸುತ್ತಿರುವುದಾಗಿ ಹೈಕೋರ್ಟ್‌ಗೆ ಮಾಹಿತಿ ನೀಡುವಂತೆ ವಕೀಲರಿಗೆ ನ್ಯಾಯಾಲಯ ಸೂಚಿಸಿತು.

ADVERTISEMENT

ಇದಕ್ಕೂ ಮುನ್ನ, ಕುಮಾರಸ್ವಾಮಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್‌ ರೊಹಟಗಿ, ‘ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಕರ್ನಾಟಕ ಲೋಕಾಯುಕ್ತದ ಆದೇಶಗಳನ್ನು ಪಾಲಿಸುವಂತೆ ಕೋರ್ಟ್‌ ಹಲವು ಆದೇಶಗಳನ್ನು ನೀಡಿದೆ. ಅದರಲ್ಲಿ ಲೋಕಾಯುಕ್ತ ನ್ಯಾಯಾಲಯ ಕೆತಗಾನಹಳ್ಳಿ ಗ್ರಾಮದ ಭೂಮಿಯ ಒತ್ತುವರಿಯ ಆದೇಶಗಳ ತನಿಖೆಯೂ ಸೇರಿದೆ’ ಎಂದರು.

ಈ ಪ್ರಕರಣಕ್ಕೆ ಸಂಬಂಧಿಸಿದ ದೂರನ್ನು 2021ರ ಮಾರ್ಚ್ 31ರಂದು ಲೋಕಾಯುಕ್ತ ರದ್ದುಗೊಳಿಸಿತ್ತು. ಆದರೆ, ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹೈಕೋರ್ಟ್‌ ನಿರ್ದೇಶನದ ಅನುಸಾರ ಕಂದಾಯ ಇಲಾಖೆಯು 2025ರ ಮಾರ್ಚ್ 18ರಂದು ನ್ಯಾಯಯುತವಾಗಿ ಮಾಲೀಕತ್ವ ಹೊಂದಿರುವ ಭೂಮಿಯನ್ನು ತೆರವುಗೊಳಿಸುವಂತೆ ಅರ್ಜಿದಾರರಿಗೆ ನೋಟಿಸ್ ಕೊಟ್ಟಿದೆ ಎಂದು ಅವರು ವಿವರಿಸಿದರು.

ಆದ್ದರಿಂದ, ಅರ್ಜಿದಾರರ ವಾದವನ್ನು ಆಲಿಸದೆ ಅವರ ವಿರುದ್ಧ ಅನ್ಯಾಯಯುತವಾಗಿ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದರು. 

ಇದನ್ನು ‘ಪ್ರಮಾದಗಳ ಹಾಸ್ಯ‘ ಎಂದು ಕರೆದಿರುವ ವಕೀಲರು, ‘ನ್ಯಾಯಾಂಗ ಪ್ರಕ್ರಿಯೆಯಲ್ಲಿ ಪ್ರತಿವಾದಿಯಲ್ಲದೆ ಇದ್ದರೂ ಅರ್ಜಿದಾರರಿಗೆ ತೆರವು ನೋಟಿಸ್ ಜಾರಿಗೊಳಿಸಲಾಗಿದೆ’ ಎಂದರು. ಈಗ ನ್ಯಾಯಮೂರ್ತಿಗಳು, ‘ಪ್ರಮಾದಗಳ ಹಾಸ್ಯ’ ಯಾರ ಪರವಿದೆ ಎಂದು ಪ್ರಶ್ನಿಸಿದರು. 

ಸಮಾಜ ಪರಿವರ್ತನಾ ಸಮುದಾಯದ ಪರವಾಗಿ ಹಾಜರಾದ ಹಿರಿಯ ವಕೀಲ ಪ್ರಶಾಂತ್ ಭೂಷಣ್, ‘ಭೂ ಒತ್ತುವರಿ ತೆರವನ್ನು ಪ್ರಶ್ನಿಸಿ ಅರ್ಜಿದಾರರು ಈಗಾಗಲೇ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ’ ಎಂಬ ವಿಷಯವ‌ನ್ನು ಪೀಠದ ಗಮನಕ್ಕೆ ತಂದರು.

ಪ್ರಕರಣವೇನು?: 

ಕುಮಾರಸ್ವಾಮಿ ಮತ್ತು ಅವರ ಕುಟುಂಬದವರು ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನುಗಳನ್ನು ಕಬಳಿಸಿದ್ದಾರೆ ಎಂದು ಆರೋಪಿಸಿ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್‌.ಆರ್‌. ಹಿರೇಮಠ ಅವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

 ಭೂಕಬಳಿಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರು ಹೊರಡಿಸಿರುವ ಆದೇಶ ಜಾರಿಗೊಳಿಸುವಂತೆ ಹೈಕೋರ್ಟ್‌ ಈ ಹಿಂದೆ ಆದೇಶಿಸಿತ್ತು.

‘ಆದೇಶ ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ’ ಎಂದು ಸಮಾಜ ಪರಿವರ್ತನಾ ಸಮುದಾಯವು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್‌, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ನ್ಯಾಯಾಂಗ ನಿಂದನೆ ಅರ್ಜಿಯನ್ನು ಪ್ರಶ್ನಿಸಿ ಕುಮಾರಸ್ವಾಮಿ ಅವರು ಇದೇ 23ರಂದು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.