ADVERTISEMENT

ವಿದ್ಯಾರ್ಥಿಗಳ ಖಾತೆಗೆ ಶಿಷ್ಯವೇತನ ಜಮೆ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 27 ಜನವರಿ 2021, 18:50 IST
Last Updated 27 ಜನವರಿ 2021, 18:50 IST
ಬಿ.ಎಸ್‌ ಯಡಿಯೂಪ್ಪ
ಬಿ.ಎಸ್‌ ಯಡಿಯೂಪ್ಪ    

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರ್ಕಾರ ಪಾವತಿಸುವ ಶಿಷ್ಯ ವೇತನವನ್ನು ಇನ್ನು ಮುಂದೆ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗೆ ಜಮೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ನಡೆದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಈ ಸೂಚನೆ ನೀಡಿದ್ದಾರೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಅಂದಾಜು 14 ಲಕ್ಷ ವಿದ್ಯಾರ್ಥಿಗಳಿಗೆ ಸುಮಾರು ₹ 1,000 ಕೋಟಿ ಪಾವತಿ ಆಗಬೇಕಿದೆ. ಈವರೆಗೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದ ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಗಳ ಶುಲ್ಕವಾಗಿ ಹಣ ಪಾವತಿಸಲಾಗುತ್ತಿತ್ತು. ಆದರೆ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಹಣ ಪಾವತಿಸುವಂತೆ ಕೇಂದ್ರ ಸರ್ಕಾರ ನಿರ್ದೇಶನವಿರುವುದರಿಂದ ಈ ಕ್ರಮ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ಹೇಳಿವೆ.

ADVERTISEMENT

ಶಿಷ್ಯ ವೇತನ ವಿತರಣೆಗೆ ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗಿದ್ದು, ತಾಂತ್ರಿಕ ಕಾರಣಗಳಿಂದ ವಿಳಂಬ ಆಗಿರುವ ಬಗ್ಗೆಯೂ ಅಧಿಕಾರಿಗಳು ಮುಖ್ಯಮಂತ್ರಿಯ ಗಮನಕ್ಕೆ ತಂದರು. ತಾಂತ್ರಿಕ ಸಮಸ್ಯೆಯನ್ನು ಆದಷ್ಟು ಶೀಘ್ರ ಪರಿಹರಿಸಿ, ವಿದ್ಯಾರ್ಥಿಗಳ ಖಾತೆಗೆ ಹಣ ಪಾವತಿಸಬೇಕು ಎಂದೂ ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನಾಗಾಂಬಿಕಾ ದೇವಿ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.