ADVERTISEMENT

ಶಾಲಾ ಆವರಣದಲ್ಲಿನ ನಾಯಿಗಳ ಸ್ಥಳಾಂತರಕ್ಕೆ ಕ್ರಮ: ಶಿಕ್ಷಣ ಇಲಾಖೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2025, 16:18 IST
Last Updated 2 ಡಿಸೆಂಬರ್ 2025, 16:18 IST
   

ಬೆಂಗಳೂರು: ಮಕ್ಕಳ ಸುರಕ್ಷತೆಗಾಗಿ ರಾಜ್ಯದ ಎಲ್ಲ ಶಾಲೆಗಳ ಆವರಣದಲ್ಲಿರುವ ಬೀದಿ ನಾಯಿಗಳ ಮಾಹಿತಿ ಸಂಗ್ರಹಿಸಿ, ಸ್ಥಳೀಯ ಸಂಸ್ಥೆಗಳಿಗೆ ನೀಡುವಂತೆ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಬೀದಿ ನಾಯಿಗಳ ಉಪಟಳ ತಪ್ಪಿಸಲು ಕ್ರಮಕೈಗೊಳ್ಳಬೇಕು. ಶಾಲಾ ಆವರಣದಲ್ಲಿರುವ ನಾಯಿಗಳ ಸಂಖ್ಯೆಯನ್ನು ಲೆಕ್ಕ ಹಾಕಬೇಕು. ನಗರ ಹಾಗೂ ಗ್ರಾಮೀಣ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು. ನಾಯಿಗಳನ್ನು ಹಿಡಿದು ಪ್ರಾಣಿ ಆಶ್ರಯ ಸ್ಥಾನಗಳಿಗೆ ಸ್ಥಳಾಂತರಿಸಲು ಸಹಕರಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್‌ ಸೂಚಿಸಿದ್ದಾರೆ.  

ಬೀದಿನಾಯಿಗಳು ಶಾಲಾ ಆವರಣದೊಳಗೆ ಪ್ರವೇಶಿಸುವುದನ್ನು ತಡೆಯಲು ಸಂಸ್ಥೆಯ ಆವರಣಕ್ಕೆ ಕಾಂಪೌಂಡ್‌ ನಿರ್ಮಿಸಬೇಕು. ಮೇಲುಸ್ತುವಾರಿ ಮಾಡಲು ಹಾಗೂ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಲು ಆಯಾ ಶಾಲೆಯ ಮುಖ್ಯಶಿಕ್ಷಕರು ಅಥವಾ ಪ್ರಾಂಶುಪಾಲರನ್ನು ನೋಡಲ್‌ ಅಧಿಕಾರಿಗಳನ್ನಾಗಿ ನೇಮಕ ಮಾಡಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪ ನಿರ್ದೇಶಕರು ಕ್ರಮಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.

ADVERTISEMENT

ಮಕ್ಕಳ ಸುರಕ್ಷತೆಗಾಗಿ ಶಾಲಾ ಆವರಣದಲ್ಲಿರುವ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ಸುಪ್ರೀಂಕೋರ್ಟ್‌ ಈಚೆಗೆ ನಿರ್ದೇಶನ ನೀಡಿದ್ದು, ಅದರಂತೆ ಕ್ರಮವಹಿಸಬೇಕು ಎಂದು ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.