ADVERTISEMENT

ಎಸ್ಸಿಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸು

ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಆಯೋಗದಿಂದ ವರದಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 19:30 IST
Last Updated 2 ಜುಲೈ 2020, 19:30 IST
ನ್ಯಾಯಮೂರ್ತಿ ಎಚ್‌.ಎನ್. ನಾಗಮೋಹನದಾಸ್
ನ್ಯಾಯಮೂರ್ತಿ ಎಚ್‌.ಎನ್. ನಾಗಮೋಹನದಾಸ್   

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ 18ರಿಂದ ಶೇ 24ಕ್ಕೆ ಹೆಚ್ಚಿಸಬಹುದು ಎಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಆಯೋಗ ಶಿಫಾರಸು ಮಾಡಿದೆ.

ಪರಿಶಿಷ್ಟ ಜಾತಿಗೆ ಶೇ 2ರಷ್ಟು(ಈಗ 15ರಷ್ಟಿದೆ) ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ 4ರಷ್ಟು(ಈಗ 3ರಷ್ಟಿದೆ) ಮೀಸಲಾತಿ ಹೆಚ್ಚಳ ಮಾಡಬಹುದೇ ಎಂಬುದನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಆಯೋಗ ರಚಿಸಲಾಗಿತ್ತು.ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗುರುವಾರ ಭೇಟಿ ಮಾಡಿದ ಆಯೋಗ ತನ್ನ ವರದಿ ಸಲ್ಲಿಸಿತು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದವರಿಗೆ ಈಗ ಒಟ್ಟು ಶೇ 50ರಷ್ಟು ಮೀಸಲಾತಿ ಇದ್ದು, ಈ ಪ್ರಮಾಣ ಮೀರಬಾರದು ಎಂದು ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಬಹುದು ಎಂದು ಶಿಫಾರಸು ಮಾಡಲಾಗಿದೆ.

ADVERTISEMENT

‘ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ಆಯೋಗ ರಚಿಸಬೇಕು. ಜಾತಿಗಣತಿ ನಡೆಸಿ ಒಳ ಮೀಸಲಾತಿ ಕಲ್ಪಿಸಬಹುದು’ ಎಂದೂ ವರದಿ ಶಿಫಾರಸು ಮಾಡಿದೆ.

9ನೇ ಅನುಸೂಚಿ ಆತಂಕಕ್ಕೂ ಉತ್ತರ
ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಲುರಾಜ್ಯ ಸಚಿವ ಸಂಪುಟ ತೀರ್ಮಾನಿಸಿ, ರಾಜ್ಯ ವಿಧಾನ ಮಂಡಲದ ಅನುಮೋದನೆ ಪಡೆದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕಾಗುತ್ತದೆ. ಕೇಂದ್ರ ಸರ್ಕಾರವೂ ಒಪ್ಪಿದರೆ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿಕೊಳ್ಳಬಹುದು.

‘ಆಗ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಅಥವಾ ಕಡಿಮೆ ಮಾಡಿಕೊಳ್ಳುವ ಸಂಪೂರ್ಣ ಅಧಿಕಾರ ರಾಜ್ಯ ಸರ್ಕಾರಕ್ಕೇ ಇರಲಿದೆ. ಇದರ ವಿರುದ್ಧ ಯಾರೊಬ್ಬರೂ ನ್ಯಾಯಾಲಯದ ಮೊರೆ ಹೋಗಲು ಅವಕಾಶ ಇರುವುದಿಲ್ಲ. ಇದು ಮೀಸಲಾತಿ ಪಡೆಯುವ ಸಮುದಾಯಗಳಿಗೇ ಮುಂದೊಂದು ದಿನ ಮಾರಕವಾಗುವ ಸಾಧ್ಯತೆ ಇದೆ’ ಎನ್ನುತ್ತಾರೆ ಕಾನೂನು ತಜ್ಞರು.

‘ಆದರೆ,9ನೇ ಅನುಸೂಚಿಯಲ್ಲಿ ಎರಡು ರೀತಿಯ ಅವಕಾಶ ಇದೆ. ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾದ ತೀರ್ಮಾನಗಳನ್ನು ಸರ್ಕಾರ ಕೈಗೊಂಡರೆ ನ್ಯಾಯಾಲಯ ಮಧ್ಯಪ್ರವೇಶ ಮಾಡಲು ಅವಕಾಶ ಇದೆ. ಪ್ರಕರಣವೊಂದರಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ಮಾಡಿದೆ. ಹೀಗಾಗಿ ತೊಂದರೆ ಆಗಲಾರದು ಎಂಬ ಅಭಿಪ್ರಾಯವನ್ನು ಆಯೋಗ ನೀಡಿದೆ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.