ADVERTISEMENT

ವಿದ್ಯಾರ್ಥಿಗಳ ಆತ್ಮಹತ್ಯೆಯಿಂದ ತೀವ್ರ ದಿಗ್ಭ್ರಮೆ: ಎಚ್.ಡಿ. ಕುಮಾರಸ್ವಾಮಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಜೂನ್ 2022, 7:52 IST
Last Updated 19 ಜೂನ್ 2022, 7:52 IST
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ   

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬಾರದಿರುವುದಕ್ಕೆ ಮತ್ತು ಅನುತ್ತೀರ್ಣಗೊಂಡಿರುವುದಕ್ಕೆ ರಾಜ್ಯದಲ್ಲಿ 8 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳ ಆತ್ಮಹತ್ಯೆ ಸಂಬಂಧಿತ ವರದಿಯೊಂದನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು, ‘ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರಲಿಲ್ಲ ಅಥವಾ ಫೇಲಾದೆವು ಎನ್ನುವ ಕಾರಣಕ್ಕೆ ರಾಜ್ಯದಲ್ಲಿ 8 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಸುದ್ದಿ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ’ ಎಂದು ಉಲ್ಲೇಖಿಸಿದ್ದಾರೆ.

‘ಶೈಕ್ಷಣಿಕ ವ್ಯವಸ್ಥೆಯಲ್ಲಿ ಪರೀಕ್ಷಾ ಹಂತಗಳು ಇರುವಂತೆಯೇ ಬದುಕಿನುದ್ದಕ್ಕೂ ಅಗ್ನಿಪರೀಕ್ಷೆಗಳೇ ಇರುತ್ತವೆ. ಅವನ್ನು ಧೈರ್ಯ, ಛಲದಿಂದ ಎದುರಿಸಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ಪೋಷಕರು, ಬೋಧಕರು, ಶಿಕ್ಷಣ ಸಂಸ್ಥೆಗಳು ಮತ್ತು ಶಿಕ್ಷಣ ಇಲಾಖೆ ಮನದಟ್ಟು ಮಾಡಿಸಬೇಕು’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಅವರು ಬರೆದಿದ್ದಾರೆ.

ADVERTISEMENT

‘ವಿದ್ಯಾಭ್ಯಾಸದಲ್ಲಿ ಹಿಂದುಳಿದ ಅನೇಕರು ಉನ್ನತ ಸ್ಥಾನಗಳಿಗೆ ಹೋಗಿರುವ ಉದಾಹರಣೆಗಳು ನಮ್ಮ ಮುಂದೆ ಇವೆ. ಹೀಗಾಗಿ ಧೃತಿಗೆಡಬೇಕಿಲ್ಲ. ಪೋಷಕರು ಕೂಡ ಮಕ್ಕಳಿಗೆ ಧೈರ್ಯ ತುಂಬಬೇಕು, ಸೂಕ್ಷ್ಮ ಮನಸ್ಸಿನ ಅವರಿಗೆ ಅಕ್ಕರೆಯಿಂದ ಆತ್ಮಸ್ಥೈರ್ಯ ಮೂಡಿಸಬೇಕು’ ಎಂದು ಅವರು ಕರೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.