ADVERTISEMENT

ಹೂಡಿಕೆಯ ಆಕರ್ಷಣೆಗೆ ವಲಯವಾರು ನೀಲ ನಕ್ಷೆ: ಸಚಿವ ಎಂ.ಬಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 5 ಮೇ 2025, 15:37 IST
Last Updated 5 ಮೇ 2025, 15:37 IST
ಎಂ.ಬಿ ಪಾಟೀಲ
ಎಂ.ಬಿ ಪಾಟೀಲ   

ಬೆಂಗಳೂರು: ಇದೇ 30 ಮತ್ತು 31 ರಂದು ಬೆಂಗಳೂರಿನಲ್ಲಿ ನಡೆಯುವ ‘ಉತ್ಪಾದನಾ ಮಂಥನ್’ ಕುರಿತ ಪೂರ್ವಭಾವಿ ಸಿದ್ಧತೆಗಳ ಕುರಿತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಸೋಮವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.

ಕರ್ನಾಟಕವನ್ನು ಜಾಗತಿಕ ತಯಾರಿಕಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಸಮಾವೇಶ ನಡೆಯಲಿದೆ. ಆಯ್ದ ಪ್ರಮುಖ ತಯಾರಿಕಾ ವಲಯಗಳು ಮತ್ತು ನವೋದ್ಯಮಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ತಮ್ಮ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ. ರಾಜ್ಯದ ಹೂಡಿಕೆ ಆಕರ್ಷಣೆ ಹಾಗೂ ಆರು ಪ್ರಮುಖ ತಯಾರಿಕಾ ವಲಯಗಳಲ್ಲಿ ರಾಜ್ಯವು ಕ್ರಮಿಸಬೇಕಾದ ಅಭಿವೃದ್ಧಿ ಪಥದ ದಿಕ್ಸೂಚಿ ಆಗಲಿದೆ ಎಂದು ಎಂ.ಬಿ.ಪಾಟೀಲ ಹೇಳಿದರು.

ವಾಹನ ತಯಾರಿಕೆ, ವೈಮಾಂತರಿಕ್ಷ ಹಾಗೂ ರಕ್ಷಣೆ, ಎಲೆಕ್ಟ್ರಾನಿಕ್ಸ್‌ ಸಿಸ್ಟಮ್‌ ಡಿಸೈನ್‌ ಆ್ಯಂಡ್‌ ಮ್ಯಾನುಫ್ಯಾಕ್ಚರಿಂಗ್‌, ಭಾರಿ ಯಂತ್ರೋಪಕರಣ, ಜೈವಿಕ ತಂತ್ರಜ್ಞಾನ, ಕೃಷಿ ಹಾಗೂ ಆಹಾರ ಸಂಸ್ಕರಣೆ ಕ್ಷೇತ್ರಗಳಲ್ಲಿನ ರಾಜ್ಯದ ಸಾಧನೆಯನ್ನು ಇನ್ನಷ್ಟು ಹೊಸ ಎತ್ತರಕ್ಕೆ ಕೊಂಡೊಯ್ಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಉದ್ಯಮ ಕ್ಷೇತ್ರದ ದಿಗ್ಗಜರು ಸರ್ಕಾರಕ್ಕೆ ಮಾರ್ಗದರ್ಶನ ನೀಡಲಿದ್ದಾರೆ ಎಂದರು.

ADVERTISEMENT

ರಾಜ್ಯದಲ್ಲಿ ಬಂಡವಾಳ ಹೂಡಿಕೆಯ ಆಕರ್ಷಣೆ ಹೆಚ್ಚಿಸಲು ವಲಯವಾರು ನೀಲನಕ್ಷೆ ರೂಪಿಸುವುದು ಈ ಸಮಾವೇಶದ ಮುಖ್ಯ ಉದ್ದೇಶ. ಪ್ರಮುಖ ಆರು ತಯಾರಿಕಾ ವಲಯಗಳಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸುವುದು ಮತ್ತು ತಯಾರಿಕಾ ಚಟುವಟಿಕೆ ಹೆಚ್ಚಳಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಉದ್ಯಮ ಕ್ಷೇತ್ರದ ಪ್ರಮುಖರು ಸರ್ಕಾರಕ್ಕೆ ನೀಲ ನಕ್ಷೆ ಸಿದ್ಧಪಡಿಸಿಕೊಡಲಿದ್ದಾರೆ ಎಂದು ಪಾಟೀಲ ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಮಹೇಶ್‌ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.