ADVERTISEMENT

‘ಶಬರಿಮಲೆ ಪ್ರವೇಶಕ್ಕೆ ಶಾಂತಿಯುತ ಪರಿಹಾರ ಅಗತ್ಯ’; ಸುಬುಧೇಂದ್ರ ತೀರ್ಥ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2018, 20:15 IST
Last Updated 20 ನವೆಂಬರ್ 2018, 20:15 IST
ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿ
ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿ   

ರಾಯಚೂರು: ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ನೀಡಿರುವ ಆದೇಶ ಗೌರವಿಸುವುದರ ಜೊತೆಗೆ ಸಂಪ್ರದಾಯಕ್ಕೂ ಬೆಲೆ ಕೊಡಬೇಕಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಾಂತಿಯುತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ‘ಈ ವಿಚಾರದಲ್ಲಿ ಅಡ್ಡಗೋಡೆ ಮೇಲೆ ದೀಪ ಇಡುವ ಮಾತು ಸರಿಯಲ್ಲ. ಎಲ್ಲದಕ್ಕೂ ತನ್ನದೇ ಆದ ಗೌರವ ಇರುತ್ತದೆ. ಸಂಪ್ರದಾಯ ಪಾಲನೆಯೂ ಅಷ್ಟೇ ಮುಖ್ಯ. ಶಾಂತಿಯುತ ಮಾತುಕತೆಯಿಂದ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದು’ ಎಂದು ಅವರು ಅಭಿಪ್ರಾಯಪಟ್ಟರು.

‘ಮಂತ್ರಾಲಯ ಹತ್ತಿರ ತುಂಗಭದ್ರಾ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡುವಂತೆ ಆಂಧ್ರಪ್ರದೇಶ ಸರ್ಕಾರಕ್ಕೆ ಮನವಿ ಮಾಡಲಾಗುವುದು. ಬ್ಯಾರೇಜ್ ನಿರ್ಮಾಣದಿಂದ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ನದಿಯ ಎರಡೂ ಕಡೆಯ ಗ್ರಾಮಸ್ಥರ ಸಂಚಾರಕ್ಕೆ ಅನುಕೂಲವಾಗುತ್ತದೆ ಎಂಬುದನ್ನು ಮನವರಿಕೆ ಮಾಡಲಾಗುವುದು’ ಎಂದು ಸ್ವಾಮೀಜಿ ತಿಳಿಸಿದರು.

ADVERTISEMENT

ಮೋದಿ ಮೂರು ಬಾರಿ ಪ್ರಧಾನಿಯಾಗಲಿ: ಭೈರಪ್ಪ

ಮೈಸೂರು: ‘ನರೇಂದ್ರ ಮೋದಿ ಇನ್ನೂ ಮೂರು ಬಾರಿ ಪ್ರಧಾನಿಯಾಗಲಿ’ ಎಂದು ಸಾಹಿತಿ ಎಸ್‌.ಎಲ್‌.ಭೈರಪ್ಪ ಇಲ್ಲಿ ಮಂಗಳವಾರ ಆಶಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ದೇಶ ಉದ್ಧಾರವಾಗಬೇಕು ಎಂದರೆ ಮೋದಿ ಒಮ್ಮೆ ಪ್ರಧಾನಿಯಾದರೆ ಸಾಲದು. ಲೋಕಸಭೆ, ರಾಜ್ಯಸಭೆಯಲ್ಲಿ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ ಬರಬೇಕು. ಅವರು ಪ್ರಧಾನಿ ಆಗದಿದ್ದಲ್ಲಿ ದೇಶವು ಪಾಕಿಸ್ತಾನ, ಚೀನಾ ಪಾಲಾಗುತ್ತದೆ’ ಎಂದರು.

‘ಕಬ್ಬಿಗೆ ಬೆಂಬಲ ಬೆಲೆ ನೀಡಲೂ ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಇನ್ನು ಕೆಆರ್‌ಎಸ್‌ನಲ್ಲಿ ಕಾವೇರಿ ಮಾತೆ ಪ್ರತಿಮೆ ನಿರ್ಮಿಸಲು ಹಣ ಎಲ್ಲಿಂದ ಬರಬೇಕು’ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.