ADVERTISEMENT

ಖಾಸಗಿ ಬಸ್‌ಗೂ ಶಕ್ತಿ ಯೋಜನೆ: ಹೈಕೋರ್ಟ್‌ನಿಂದ ಅರ್ಜಿ ವಿಲೇವಾರಿ

​ಪ್ರಜಾವಾಣಿ ವಾರ್ತೆ
Published 5 ಜನವರಿ 2024, 23:22 IST
Last Updated 5 ಜನವರಿ 2024, 23:22 IST
<div class="paragraphs"><p> ಹೈಕೋರ್ಟ್‌ </p></div>

ಹೈಕೋರ್ಟ್‌

   

ಬೆಂಗಳೂರು: ‘ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಲು ಆದೇಶಿಸಬೇಕು‘ ಎಂದು ಕೋರಲಾಗಿದ್ದ ಅರ್ಜಿಯನ್ನು ವಿಲೇವಾರಿ ಮಾಡಿರುವ ಹೈಕೋರ್ಟ್, ‘ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಎರಡು ತಿಂಗಳಲ್ಲಿ ಪರಿಗಣಿಸಿ‘ ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಸಂಬಂಧ ಉಡುಪಿ ಜಿಲ್ಲೆ ಕಾರ್ಕಳದ ಖಾಸಗಿ ಬಸ್ ಆಪರೇಟರ್ ಶರತ್‌ ಕುಮಾರ್ ಶೆಟ್ಟಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ADVERTISEMENT

ಅರ್ಜಿಯಲ್ಲಿ ಏನಿದೆ?: ‘ರಾಜ್ಯದಲ್ಲಿ ಖಾಸಗಿ ಬಸ್‌ಗಳ ಸಂಚಾರಕ್ಕೆ 65 ವರ್ಷಗಳ ಇತಿಹಾಸವಿದೆ. 16 ಜಿಲ್ಲೆಗಳಲ್ಲಿ 9 ಸಾವಿರಕ್ಕೂ ಹೆಚ್ಚು ಖಾಸಗಿ ಬಸ್‌ಗಳು ಸೇವೆ ಒದಗಿಸುತ್ತಿವೆ. 75 ಸಾವಿರ ಕಾರ್ಮಿಕರ ಜೀವನ ಇವುಗಳ ಮೇಲೆ ಅವಲಂಬಿತವಾಗಿದೆ. ಖಾಸಗಿ ಬಸ್ ಆಪರೇಟರ್‌ಗಳು ಅತಿ ಹೆಚ್ಚು ತೆರಿಗೆ ಪಾವತಿದಾರರಾಗಿದ್ದು, ವಾರ್ಷಿಕ ₹ 1,620 ಕೋಟಿ ತೆರಿಗೆ ಸಂಗ್ರಹವಾಗುತ್ತಿದೆ‘ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

‘ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಖಾಸಗಿ ಬಸ್ ಆಪರೇಟರ್‌ಗಳಿಗೆ ಸಂಕಷ್ಟ ಪ್ರಾರಂಭವಾಗಿದೆ. ಹಾಗಾಗಿ, ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ಅನ್ವಯಿಸಬೇಕು. ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಪ್ರಯಾಣ ವೆಚ್ಚವನ್ನು ಸರ್ಕಾರವು ಖಾಸಗಿ ಬಸ್ ಆಪರೇಟರ್‌ಗಳಿಗೆ ಮರು ಪಾವತಿ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಾರಿಗೆ ಇಲಾಖೆಗೆ 2023ರ ಜುಲೈ 26ರಂದು ಸಲ್ಲಿಸಿರುವ ಮನವಿಯನ್ನು ಪರಿಗಣಿಸಲು ಆದೇಶಿಸಬೇಕು‘ ಎಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.