ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಪ್ರಯಾಣಿಸಿದ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್ ಅನ್ನು ವಿತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳೆ ಲತಾ ಅವರನ್ನು ಸನ್ಮಾನಿಸಿದರು.
ಬಸ್ ನಲ್ಲಿದ್ದ ಮಹಿಳೆಯರಿಗೆ ಇಳಕಲ್ ಸೀರೆ, ಸಿಹಿ ವಿತರಿಸಲಾಯಿತು.
ಜೋಳದ ರೊಟ್ಟಿ: ಶಕ್ತಿ ಯೋಜನೇಯ ಫಲಾನುಭವಿಯೊಬ್ಬರು ಮುಖ್ಯಮಂತ್ರಿ ಮತ್ತು ಸಚಿವರಿಗೆ ಖಡಕ್ ರೊಟ್ಟಿ, ಶೇಂಗಾ ಹೋಳಿಗೆ ನೀಡಿ ಹಾರೈಸಿದರು.
ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಅರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಸಚಿವ ಎಚ್. ಸಿ. ಮಹದೇವಪ್ಪ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್. ಎಂ. ರೇವಣ್ಣ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ ಉಪಸ್ಥಿದ್ದರು.
ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿ, 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಸಿಗಂದೂರಿನಲ್ಲಿ-ಶಿಷ್ಠಾಚಾರ ಪಾಲನೆಯಾಗಿಲ್ಲ
ಸಾಗರ ತಾಲ್ಲೂಕಿನ ಸಿಗಂದೂರು ಸೇರುದಂತೆ ವಿವಿಧೆಡೆ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರು. ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಶಿಷ್ಟಾಚಾರ ಪಾಲಿಸದೇ ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ. ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದರು.
ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಿ ಆ ಕಾರ್ಯಕ್ರಮದಲ್ಲಿ ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ ಎಂದು ತಿಳಿಸಿದರು.
ನಮ್ಮ ನಡುವೆ ತಿಕ್ಕಾಟವನ್ನು ಕೇಂದ್ರ ಸರ್ಕಾರವೇ ಆರಂಭಿಸಿದೆ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರನ್ನಾಗಲೀ, ಸ್ಥಳೀಯ ಶಾಸಕರನ್ನಾಗಲೀ ಆಮಂತ್ರಿಸಿಲ್ಲ ಎಂದರು.
ಬಿ.ಸರೋಜಾದೇವಿ ನಿಧನಕ್ಕೆ ಸಂತಾಪ
ನಟಿ ಬಿ.ಸರೋಜಾದೇವಿ ಅವರ ನಿಧನಕ್ಕೆ ಸಂತಾಪ ಸೂಚಿಸಿದರು.
ಬಿ.ಸರೋಜಾದೇವಿಯವರು ಕನ್ನಡ ನಾಡು ಕಂಡ ಪ್ರತಿಭಾವಂತ ಕಲಾವಿದರಾಗಿದ್ದರು. ಬಹುಭಾಷಾ ನಟಿಯಾಗಿದ್ದ ಅವರು ಅಪ್ರತಿಮ ಕಲಾವಿದರಾಗಿದ್ದು, ಅವರ ಸಾವಿನಿಂದ ಇಡೀ ಕಲಾಜಗತ್ತು ಬಡವಾಗಿದೆ. ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬವರ್ಗ ಹಾಗೂ ಅಭಿಮಾನಿ ಬಳಗಕ್ಕೆ ದು:ಖವನ್ನು ಭರಿಸುವ ಶಕ್ತಿ ತುಂಬಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳೆಯರು ಪ್ರಯಾಣಿಸುವ ಮೂಲಕ ಹೊಸ ಮೈಲುಗಲ್ಲು ಸ್ಥಾಪನೆಯಾಗಿದೆ. ಎಲ್ಲ ಮಹಿಳೆಯರು ಸಂಭ್ರಮ ಪಟ್ಟಿದ್ದಾರೆ ಎಂದು ತಿಳಿಸಿದರು
ಆದರೆ ಬಿಜೆಪಿ ಐಟಿ ಸೆಲ್ ಮಾತ್ರ ಆರಂಭದಿಂದಲೂ ನಕಾರಾತ್ಮಕ ಪ್ರಚಾರ ಮಾಡಿಕೊಂಡು ಬಂದಿದ್ದಾರೆ. ಈಗಲೂ ಮುಂದುವರಿಸಿದ್ದಾರೆ ಎಂದು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.