ADVERTISEMENT

ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ ಶರತ್‌ ಬಚ್ಚೇಗೌಡ 26ಕ್ಕೆ ‘ಕೈ’ ತೆಕ್ಕೆಗೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2021, 20:29 IST
Last Updated 17 ಫೆಬ್ರುವರಿ 2021, 20:29 IST
ಶರತ್‌ ಬಚ್ಚೇಗೌಡ
ಶರತ್‌ ಬಚ್ಚೇಗೌಡ   

ಬೆಂಗಳೂರು: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ, ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಇದೇ 26ರಂದು ಕಾಂಗ್ರೆಸ್‌ ಸೇರಲಿದ್ದಾರೆ.

ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶರತ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ಖಚಿತಪಡಿಸಿವೆ.

ಶರತ್‌ ಅವರು ಕಾಂಗ್ರೆಸ್ ಸೇರ್ಪಡೆ ವಿಚಾರ ಕೆಲವು ತಿಂಗಳುಗಳಿಂದ ಚರ್ಚೆಗೆ ಗ್ರಾಸವಾಗಿತ್ತು. ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಹಲವು ಸುತ್ತಿನ ಚರ್ಚೆಯ ಬಳಿಕ ಇದೀಗ ಸೇರ್ಪಡೆ ದಿನ ನಿಗದಿಯಾಗಿದೆ.

ADVERTISEMENT

2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ, ಹಿಂದೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಂ.ಟಿ.ಬಿ ನಾಗರಾಜ್ ವಿರುದ್ಧ ಸೋಲು ಕಂಡಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಎಂ.ಟಿ.ಬಿ ನಾಗರಾಜ್‌,ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ, ಶಾಸಕ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರಿದ್ದರು.

ಹೊಸಕೋಟೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ.ಟಿ.ಬಿ ನಾಗರಾಜ್‌, ಬಿಜೆಪಿಯಿಂದ ಟಿಕೆಟ್‌ ಸಿಗದ ಕಾರಣಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ವಿರುದ್ಧ ಪರಾಭವಗೊಂಡಿದ್ದರು. ಆದರೆ, ವಿಧಾನಪರಿಷತ್ ಸದಸ್ಯರಾಗಿ ಬಿಜೆಪಿಯಿಂದ ಆಯ್ಕೆಯಾದ ಎಂ.ಟಿ.ಬಿ ನಾಗರಾಜ್, ಇದೀಗ ಮತ್ತೆ ಸಚಿವರಾಗಿದ್ದಾರೆ.

ಕಾಂಗ್ರೆಸ್ ಸೇರಿದ ಬಳಿಕ, ಮಾಚ್೯ ಮೊದಲ ವಾರದಲ್ಲಿ ಹೊಸಕೋಟೆಯಲ್ಲಿ ಕಾಂಗ್ರೆಸ್‌ ಪಕ್ಷದ ಬೃಹತ್ ಸಮಾವೇಶ ನಡೆಸಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಶರತ್ ನಿರ್ಧರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.