ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ಪ್ರಕಟವಾಗುವ ಹಾಗೂ ಅಭ್ಯರ್ಥಿ ಆಯ್ಕೆಗೂ ಮುನ್ನವೇ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಈಗಾಗಲೇ ಬಿಜೆಪಿ ಪ್ರಚಾರ ಆರಂಭಿಸಿದೆ.
ಜೆಡಿಎಸ್‌ನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಬಿ.ಸತ್ಯನಾರಾಯಣ ನಿಧನದಿಂದ ಉಪಚುನಾವಣೆ ನಡೆಯಲಿದೆ.
ಕಾಂಗ್ರೆಸ್, ಜೆಡಿಎಸ್‌ನಲ್ಲಿ ಇನ್ನೂ ಚುನಾವಣೆಗೆ ಸಜ್ಜಾಗುತ್ತಿದ್ದು, ಒಂದು ಹೆಜ್ಜೆ ಮುಂದಿಟ್ಟಿರುವ ಬಿಜೆಪಿ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ. ಈಗಾಗಲೇ ಬೂತ್ ಸಮಿತಿಗಳನ್ನು ಪುನರ್ ರಚಿಸುವ ಕೆಲಸಕ್ಕೆ ಚಾಲನೆ ನೀಡಿದ್ದು, ಆ ಮೂಲಕ ಸ್ಥಳೀಯವಾಗಿ ಮತದಾರರನ್ನು ತಲುಪುವಲ್ಲಿ ನಿರತವಾಗಿದೆ.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಸುರೇಶ್‌ಗೌಡ ಕ್ಷೇತ್ರದಲ್ಲಿ ಸುತ್ತಾಟ ನಡೆಸಿದ್ದಾರೆ. ಹಿಂದಿನ ವಿಧಾನಸಭಾ ಚುನಾವಣೆಗಳಲ್ಲಿ ಸೋತಿದ್ದ
ಬಿ.ಕೆ.ಮಂಜುನಾಥ್, ಎಸ್.ಆರ್.ಗೌಡ ನಡುವಿನ ಭಿನ್ನಾಭಿಪ್ರಾಯವನ್ನು ಶಮನಮಾಡಿ ಒಟ್ಟಿಗೆ ಕರೆದುಕೊಂಡು ಹೋಗುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.
ಈ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್‌ನಿಂದ ಕಳೆದ ಬಾರಿ ಸೋತಿದ್ದ ಟಿ.ಬಿ.ಜಯಚಂದ್ರ ಸಹಜವಾಗಿ ಟಿಕೆಟ್ ಸಿಗಲಿದೆ ಎಂಬ ಆಶಾಭಾವನೆ ಹೊಂದಿದ್ದಾರೆ.
ಮಧುಗಿರಿ ಕ್ಷೇತ್ರದಲ್ಲಿ ಹಿಂದಿನ ಚುನಾವಣೆಯಲ್ಲಿ ಸೋತಿದ್ದ ಕೆ.ಎನ್.ರಾಜಣ್ಣ ಸಹ ಸಾರ್ವಜನಿಕವಾಗಿ ಟಿಕೆಟ್‌ಗೆ ಬೇಡಿಕೆ ಸಲ್ಲಿಸಿದ್ದಾರೆ. ಜಯಚಂದ್ರ ಕ್ಷೇತ್ರದಲ್ಲಿ ಹಿಡಿತ ಹೊಂದಿದ್ದು, ರಾಜಣ್ಣ ಪಕ್ಕದ ಕ್ಷೇತ್ರದವರು. ಹಾಗಾಗಿ ಜಯಚಂದ್ರ ಅವರಿಗೆ ಟಿಕೆಟ್ ಸಿಗಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕಳೆದ ಚುನಾವಣೆಯಲ್ಲಿ ಸೋತ ನಂತರವೂ ಜಯಚಂದ್ರ ಅವರು ಕ್ಷೇತ್ರದ ಸಂಪರ್ಕ ಮುಂದುವರಿಸಿದ್ದಾರೆ. ಕೊರೊನಾ ಸೋಂಕಿತರ ಕುಟುಂಬಗಳಿಗೆ ಆಹಾರ ಕಿಟ್ ವಿತರಿಸುವ ಮೂಲಕ ಜನರಿಗೆ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ.
ಜೆಡಿಎಸ್‌ನಲ್ಲಿ ಗೊಂದಲ: ಜೆಡಿಎಸ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳ ದೊಡ್ಡಪಟ್ಟಿ ಇದ್ದು, ಒಂದು ರೀತಿಯಲ್ಲಿ ಗೊಂದಲದ ವಾತಾವರಣ ಮೂಡಿದೆ. ಸತ್ಯನಾರಾಯಣ ಕುಟುಂಬಕ್ಕೆ ಟಿಕೆಟ್ ಕೊಡಲು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಮುಂದಾಗಿದ್ದಾರೆ. ಆದರೆ ಅವರ ಪತ್ನಿ ಅಮ್ಮಾಜಮ್ಮ ಟಿಕೆಟ್ ನಿರಾಕರಿಸಿದ್ದು, ಪುತ್ರ ಬಿ.ಎಸ್.ಸತ್ಯಪ್ರಕಾಶ್‌ಗೆ ಅವಕಾಶ ಮಾಡಿಕೊಡುವಂತೆ ಕೇಳಿಕೊಂಡಿದ್ದಾರೆ. ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ಪುತ್ರ ರಾಜೇಶ್‌ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಆರ್.ಉಮೇಶ್, ಜಿ.ಪಂ ಅಧ್ಯಕ್ಷೆ ಲತಾ ಪತಿ ಕಲ್ಕೆರೆ ರವಿಕುಮಾರ್ ತಮ್ಮ ನಾಯಕರ ಮೂಲಕ ಟಿಕೆಟ್ ಪಡೆಯಲು ಪ್ರಯತ್ನ ಆರಂಭಿಸಿದ್ದಾರೆ.
ಬಿಜೆಪಿಯ ಬಿ.ಕೆ.ಮಂಜುನಾಥ್, ಜೆಡಿಎಸ್‌ನ ರವಿಕುಮಾರ್ ಕುರುಬ ಸಮುದಾಯಕ್ಕೆ ಸೇರಿದ್ದು, ಉಳಿದ ಟಿಕೆಟ್ ಆಕಾಂಕ್ಷಿಗಳು ಕುಂಚಿಟಿಗ ಸಮುದಾಯಕ್ಕೆ ಸೇರಿದ್ದಾರೆ. ಯಾವ ಪಕ್ಷದವರು ಯಾವ ಸಮುದಾಯಕ್ಕೆ ಅವಕಾಶ ನೀಡುತ್ತಾರೆ ಎಂಬುದರ ಮೇಲೂ ಅಭ್ಯರ್ಥಿ ಆಯ್ಕೆ ನಿರ್ಧಾರವಾಗಲಿದೆ ಎಂದು
ಹೇಳಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.