ಪ್ರಜಾವಾಣಿ ವಾರ್ತೆ
ಬೆಂಗಳೂರು: ‘ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-66ರ ಅಂಚಿನಲ್ಲಿ ಉಂಟಾದ ಗುಡ್ಡ ಕುಸಿತದ ಪ್ರಕರಣದಲ್ಲಿ ಮಣ್ಣಿನಡಿ ಸಿಲುಕಿರುವ ಅಥವಾ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಅಂದಾಜಿಸಲಾಗಿರುವ ವ್ಯಕ್ತಿಗಳ ರಕ್ಷಣೆ ಹಾಗೂ ತೆರವು ಕಾರ್ಯಚರಣೆಗೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ಸಲ್ಲಿಸಿ’ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಈ ಸಂಬಂಧ ರಾಜ್ಯ ಹೈಕೋರ್ಟ್ ವಕೀಲ ಶಿಜಿ ಮಲಯಾಳಿ ಹಾಗೂ ನವದೆಹಲಿಯ ಕೆ.ಆರ್.ಸುಭಾಷ್ ಚಂದ್ರನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಡೆಪ್ಯುಟಿ ಸಾಲಿಸಿಟರ್ ಜನರಲ್ ಎಚ್.ಶಾಂತಿಭೂಷಣ್, ‘ಕೇಂದ್ರವು ಎಲ್ಲ ರೀತಿಯ ಕಾರ್ಯಾಚರಣೆ ಕೈಗೊಂಡಿದೆ’ ಎಂದು ಮಂಗಳವಾರ ಬೆಳಗಿನವರೆಗಿನ ಕಾರ್ಯಾಚರಣೆ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.
ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ಮುಂದುವರಿದ ಕಾರ್ಯಾಚರಣೆಗೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ಸಲ್ಲಿಸಿ’ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಬುಧವಾರಕ್ಕೆ (ಜುಲೈ 24) ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.