ಬೆಂಗಳೂರು: ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದಿಂದ 2024ರಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಆಯ್ಕೆಯನ್ನು ಅಸಿಂಧು ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ನಗರದ ಉದ್ಯಮಿ ಮತ್ತು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಿಕಟವರ್ತಿಯೂ ಆದ ಬಿ.ಮೋಹನ ಕುಮಾರ್ ಸಲ್ಲಿಸಿದ್ದ ಈ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ಏಸಕದಸ್ಯ ನ್ಯಾಯಪೀಠ ಗುರುವಾರ ಪ್ರಕಟಿಸಿದೆ.
ವಿಚಾರಣೆ ವೇಳೆ ಅರ್ಜಿದಾರ ಮೋಹನ ಕುಮಾರ್ ಪರ ಹೈಕೋರ್ಟ್ ವಕೀಲ ಸ್ಮರಣ ಶೆಟ್ಟಿ, ‘ಶೋಭಾ ಕರಂದ್ಲಾಜೆ ಅವರು ನಾಮಪತ್ರ ಸಲ್ಲಿಸುವ ಮುನ್ನ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವಾಗ ವಾಸ್ತವಾಂಶ ಮುಚ್ಚಿಟ್ಟಿದ್ದಾರೆ’ ಎಂದು ಆಕ್ಷೇಪಿಸಿದ್ದರು.
ಅರ್ಜಿದಾರರ ಈ ವಾದವನ್ನು ತಿರಸ್ಕರಿಸಿರುವ ನ್ಯಾಯಪೀಠ, ‘ಪ್ರಜಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 81ರ ಅಡಿಯಲ್ಲಿ ಸಲ್ಲಿಸಲಾಗಿರುವ ಈ ಅರ್ಜಿಯು, ಯಾವ ಕಾರಣಗಳಡಿ ವಿಚಾರಣೆಗೆ ಒಳಪಡಬೇಕು ಎಂಬುದನ್ನು ನಿಖರವಾಗಿ ವಿಶದಪಡಿಸುವಲ್ಲಿ ವಿಫಲವಾಗಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ವಜಾಗೊಳಿಸಿದೆ. ಶೋಭಾ ಕರಂದ್ಲಾಜೆ ಪರ ಹೈಕೋರ್ಟ್ ವಕೀಲ ವೆಂಕಟೇಶ್ ಪಿ.ದಳವಾಯಿ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.