ADVERTISEMENT

ವೈದ್ಯರ ಕೊರತೆ: ಕೇಂದ್ರ–ರಾಜ್ಯಕ್ಕೆ ಹೈಕೋರ್ಟ್ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 9 ಜನವರಿ 2024, 20:40 IST
Last Updated 9 ಜನವರಿ 2024, 20:40 IST
<div class="paragraphs"><p>ಹೈಕೋರ್ಟ್</p></div>

ಹೈಕೋರ್ಟ್

   

ಬೆಂಗಳೂರು: ‘ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರೂ ಸೇರಿದಂತೆ 16 ಸಾವಿರಕ್ಕೂ ಹೆಚ್ಚಿನ ವೈದ್ಯಕೀಯ ಸಿಬ್ಬಂದಿ ಕೊರತೆ’ ಇದೆ ಎಂಬ ಆಕ್ಷೇಪಣೆಗೆ ಸಂಬಂಧಿಸಿದ ಅರ್ಜಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ADVERTISEMENT

ಪ್ರತಿವಾದಿಗಳಾದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹಾಗೂ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿ ವಿಚಾರಣೆಯನ್ನು ಫೆಬ್ರುವರಿ 8ಕ್ಕೆ ಮುಂದೂಡಿದೆ.

ಏನಿದು ಅರ್ಜಿ?: ರಾಜ್ಯದ ಎಲ್ಲ ಜಿಲ್ಲೆಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಬಿಬಿಎಸ್ ವೈದ್ಯರೂ ಸೇರಿದಂತೆ 16 ಸಾವಿರಕ್ಕೂ ಹೆಚ್ಚು ವೈದ್ಯಕೀಯ, ಅರೆ ವೈದ್ಯಕೀಯ ಹಾಗೂ ಡಿ ಗ್ರೂಪ್ ಸಿಬ್ಬಂದಿ ಕೊರತೆ ಇದೆ ಎಂಬ ಬಗ್ಗೆ ‘ಫೆಡರೇಷನ್ ಆಫ್ ಇಂಡಿಯನ್ ಛೇಂಬರ್ಸ್‌ ಆಫ್ ಕಾಮರ್ಸ್ ಆ್ಯಂಡ್‌ ಇಂಡಸ್ಟ್ರಿ’ (ಎಫ್‌ಐಸಿಸಿಐ) ವರದಿಯೊಂದನ್ನು ಬಿಡುಗಡೆ ಮಾಡಿತ್ತು.

‘ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 723 ಎಂಬಿಬಿಎಸ್ ವೈದ್ಯರು, 7,492 ಶುಶ್ರೂಷಕಿಯರು, 1,517 ಲ್ಯಾಬ್ ಟೆಕ್ನೀಷಿಯನ್‌ಗಳು, 1,512 ಫಾರ್ಮಾಸಿಸ್ಟ್‌ಗಳು, 1,752 ಸಹಾಯಕರು 3,253 ಗ್ರೂಪ್ ಡಿ ನೌಕರರೂ ಸೇರಿದಂತೆ 16,500ಕ್ಕೂ ಹೆಚ್ಚು ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ, ತಾಂತ್ರಿಕ ಹಾಗೂ ಡಿ ಗ್ರೂಪ್ ನೌಕರರ ಕೊರತೆ ಇದೆ. ನಗರ ಪ್ರದೇಶಗಳಲ್ಲಿ 245 ಮತ್ತು ಗ್ರಾಮೀಣ ಪ್ರದೇಶದಲ್ಲಿ 209 ಸೇರಿ ಒಟ್ಟು 454 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆ ಇದೆ’ ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಈ ವರದಿಯನ್ನು ಉಲ್ಲೇಖಿಸಿ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದ ಸುದ್ದಿಯನ್ನು ಆಧರಿಸಿ ಹೈಕೋರ್ಟ್‌ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.