ADVERTISEMENT

ಜಾಹೀರಾತಲ್ಲಿ ನೆಹರೂ ಜತೆಗೇ ಹೆಡಗೇವಾರರನ್ನೂ ಕೈಬಿಟ್ಟಿರಲ್ಲ ಏಕೆ? ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಆಗಸ್ಟ್ 2022, 7:53 IST
Last Updated 14 ಆಗಸ್ಟ್ 2022, 7:53 IST
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ   

ಬೆಂಗಳೂರು: 'ಮನೆ ಮನೆಯ ಮೇಲೆ ತ್ರಿವರ್ಣ ಧ್ವಜ' ಅಭಿಯಾನದ ಅಂಗವಾಗಿ ರಾಜ್ಯ ಸರ್ಕಾರವು ಮಾಧ್ಯಮಗಳಿಗೆ ನೀಡಿರುವ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿರುವ ಜಾಹೀರಾತಿನಲ್ಲಿ ಆರ್‌ಎಸ್‌ಎಸ್‌ ಸಂಸ್ಥಾಪಕ ಕೆ.ಬಿ.ಹೆಡಗೆವಾರ್‌ ಅವರ ಚಿತ್ರವನ್ನೂಏಕೆ ಕೈಬಿಟ್ಟಿದ್ದೀರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿ ಎರಡು ಬಾರಿ ಜೈಲುಶಿಕ್ಷೆ ಅನುಭವಿಸಿದ್ದ ಹೆಡಗೆವಾರ್ ಚಿತ್ರ ಕೈಬಿಡಲು ತ್ರಿವರ್ಣ ಧ್ವಜವನ್ನು ತಿರಸ್ಕರಿಸಿದ್ದ ಅವರ ಬಂಡವಾಳ ಬಯಲಾಗಬಹುದೆಂಬ ಭಯವೇ? ಎಂದು ಸಿಎಂ ಬೊಮ್ಮಾಯಿ ಅವರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜಾಹೀರಾತಿನಲ್ಲಿ ಜವಾಹರಲಾಲ್‌ ನೆಹರೂ ಚಿತ್ರವನ್ನು ಕೈಬಿಟ್ಟಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಸರಣಿ ಟ್ವೀಟ್‌ ಮಾಡಿದ್ದಾರೆ.

ADVERTISEMENT

ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ ಧೀಮಂತ ಸ್ವಾತಂತ್ರ್ಯ ಹೋರಾಟಗಾರ ನೆಹರೂ ಅವರಿಗೆ ಮಾಡಿರುವ ಅವಮಾನವನ್ನು ಸಹಿಸಲಾಗದು. ಈ ಅವಮಾನಕ್ಕಾಗಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ.

ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ ಒಂಬತ್ತು ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ.ಡಿ. ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ. ಆರ್‌ಎಸ್‌ಎಸ್‌ ಕೋಮು ರಾಜಕಾರಣವನ್ನು ವಿರೋಧಿಸಿದ್ದ, ಗಾಂಧಿ ಹತ್ಯೆಯ ನಂತರ ಅದನ್ನು ನಿಷೇದಿಸಿದ್ದ ಮತ್ತು ತನ್ನ ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ನೆಹರೂ ಅವರ ಬಗ್ಗೆ ಆರ್‌ಎಸ್‌ಎಸ್‌ ಅಲರ್ಜಿಯನ್ನು ಅರ್ಥಮಾಡಿಕೊಳ್ಳಬಹುದು, ನಿಮಗೇನಾಗಿದೆ ಬೊಮ್ಮಾಯಿ ಅವರೇ ಎಂದೂ ಕೇಳಿದ್ದಾರೆ.

ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನಮೂದಿಸಲು ನಿಮಗೆ ಸಿಕ್ಕ ಏಕೈಕ ವ್ಯಕ್ತಿ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕ್ಷಮೆ ಯಾಚಿಸಿದ್ದ ಹೇಡಿ ಸಾವರ್ಕರ್ ಮಾತ್ರ ಎನ್ನುವುದು ನಿಮ್ಮ ಪರಿವಾರದ ಸ್ವಾತಂತ್ರ್ಯ ಹೋರಾಟದ ಸತ್ಯವನ್ನು ಬೆತ್ತಲೆ ಮಾಡಿದೆ. ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿ ಎರಡು ಬಾರಿ (1921 ಮತ್ತು 1931) ಜೈಲುಶಿಕ್ಷೆ ಅನುಭವಿಸಿದ್ದ ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡಗೆವಾರ್ ಅವರ ಚಿತ್ರವನ್ನು ಯಾಕೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಿಂದ ಕೈಬಿಟ್ಟಿದ್ದೀರಿ ಬೊಮ್ಮಾಯಿಯವರೇ? ತ್ರಿವರ್ಣ ಧ್ವಜವನ್ನು ತಿರಸ್ಕರಿಸಿದ್ದ ಅವರ ಬಂಡವಾಳ ಬಯಲಾಗಬಹುದೆಂಬ ಭಯವೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಬ್ರಿಟಿಷರ ಕ್ಷಮೆ ಕೇಳಿ ಜೈಲಿನಿಂದ ಬಿಡುಗಡೆಗೊಂಡ ವಿ.ಡಿ. ಸಾವರ್ಕರ್ ಅವರಿಗೆ ಮೊದಲ ಸಾಲಿನ ಗೌರವ, ಸ್ವಾತಂತ್ರ್ಯ ಹೋರಾಟದ ಜೊತೆ ಬಹುಜನ ಸಮಾಜದ ಹಿತಾಸಕ್ತಿಯ ರಕ್ಷಣೆಗಾಗಿಯೂ ಹೋರಾಟ ನಡೆಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೊನೆಯ ಸಾಲಿನ ನಿರ್ಲಕ್ಷ್ಯ. ಸುಪ್ತ ಅಸ್ಪೃಶ್ಯತೆಯ ನಗ್ನ ಪ್ರದರ್ಶನ ಎಂದೂ ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.