ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಹಣ ಬರದಿರುವ ಬಗ್ಗೆ ಸೋಮವಾರ ಪ್ರಜಾವಾಣಿಯಲ್ಲಿ ಪ್ರಕಟವಾಗಿರುವ ವಿಶೇಷ ವರದಿಯನ್ನು ಉಲ್ಲೇಖಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಹಣದ ಕೊರತೆಯಿಂದ ರಾಜ್ಯ ಸರ್ಕಾರ ದಿವಾಳಿಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿರುವ ಅವರು, ‘ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮಗಳಿಗೆ ಕೇಂದ್ರ ನೀಡಬೇಕಾಗಿದ್ದು ರೂ.5,335ಕೋಟಿ. ಆದರೆ ಬಿಡುಗಡೆಯಾಗಿದ್ದು ರೂ.911 ಕೋಟಿ ಮಾತ್ರ. ವಸತಿ, ಶಿಶು ಕಲ್ಯಾಣ ಅಲ್ಪಸಂಖ್ಯಾತರ ಕಲ್ಯಾಣ ಸೇರಿದಂತೆ 24 ಇಲಾಖೆಗಳ ಕಾರ್ಯಕ್ರಮಗಳು ಹಣದ ಕೊರತೆಯಿಂದ ಸ್ಥಗಿತಗೊಂಡಿವೆ. ರಾಜ್ಯ ಸರ್ಕಾರ ದಿವಾಳಿಯಾಗುತ್ತಿದೆ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಅಸಮರ್ಥರೆಂದು ಕರೆದಿರುವ ಸಿದ್ದರಾಮಯ್ಯ, ‘ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳ ಅನುದಾನ,ತೆರಿಗೆ ಪಾಲು ಮತ್ತು ಜಿಎಸ್ ಟಿ ಪರಿಹಾರ ಸೇರಿದಂತೆ ರೂ.73 ಸಾವಿರ ಕೋಟಿ ಹಣ ರಾಜ್ಯಕ್ಕೆ ಕೇಂದ್ರ ನೀಡಬೇಕಾಗಿದೆ. ಈ ಬಾಕಿ ಹಣವನ್ನು ಕೇಳಲು ಅಸಮರ್ಥರಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ನಾಯಕರು ರಾಜ್ಯಕ್ಕೆ ದ್ರೋಹ ಎಸಗುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಡಿಯೂರಪ್ಪನವರ ಮೇಲಿನ ದ್ವೇಷಕ್ಕೆ ರಾಜ್ಯದ ಹಿತವನ್ನು ಕೇಂದ್ರ ಸರ್ಕಾರ ಬಲಿಕೊಡುತ್ತಿದೆ ಎಂದು ಆರೋಪಿಸಿರುವ ಅವರು, ‘ಮುಖ್ಯಮಂತ್ರಿ ಯಡಿಯುರಪ್ಪನವರ ಮಾತಿಗೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಕವಡೆ ಕಾಸಿನ ಕಿಮ್ಮತ್ತು ಕೊಡುತ್ತಿಲ್ಲ. ಅನುದಾನ ಕೋರಿ ಬೇಡಿಕೆ ಸಲ್ಲಿಸಲು ಅವಕಾಶ ನೀಡದೆ ಅವರು ಅವಮಾನಿಸುತ್ತಿದ್ದಾರೆ. ಯಡಿಯೂರಪ್ಪನವರ ಮೇಲಿನ ದ್ವೇಷಕ್ಕೆ ರಾಜ್ಯದ ಹಿತವನ್ನು ಕೇಂದ್ರ ಸರ್ಕಾರ ಬಲಿಕೊಡುತ್ತಿದೆ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
#FinancialEmergencyInKtaka ಎಂಬ ಹ್ಯಾಶ್‌ಟ್ಯಾಗ್ ಅನ್ನು ಟ್ವೀಟ್‌ಗಳಿಗೆ ಬಳಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.