ADVERTISEMENT

ಬಿಎಸ್‌ವೈ ರಾಜೀನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಅವಕಾಶ ನೀಡಲಿ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2020, 20:46 IST
Last Updated 24 ಡಿಸೆಂಬರ್ 2020, 20:46 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ‘ಕೆಐಎಡಿಬಿ ಜಮೀನಿನ ಡಿ–ನೋಟಿಫೈ ಅಕ್ರಮದ ತನಿಖೆಯ ರದ್ದತಿಗೆ ಹೈಕೋರ್ಟ್ ನಿರಾಕರಿಸಿರುವುದರಿಂದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಿ, ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾನೂನುಬಾಹಿರವಾಗಿ ಜಮೀನು ಡಿನೋಟಿಫೈ ಮಾಡಿದ ಆರೋಪವನ್ನು ಯಡಿಯೂರಪ್ಪ ಎದುರಿಸುತ್ತಿದ್ದಾರೆ. ಈ ಆರೋಪದ ಬಗ್ಗೆ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿದರೆ ತನ್ನ ಅಧಿಕಾರದ ಬಲದಿಂದ ತನಿಖೆಯ ಹಾದಿ ತಪ್ಪಿಸುವ ಸಾಧ್ಯತೆಗಳಿವೆ. ತಾವು ಮುಖ್ಯಮಂತ್ರಿಯಾದ ಕೂಡಲೇ ಈ ಪ್ರಕರಣದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ಪಡೆದಿರುವುದೇ ಇದಕ್ಕೆ ಸಾಕ್ಷಿ’ ಎಂದೂ ಹೇಳಿದರು.

‘ಕೈಗಾರಿಕೆಗಳ ಸ್ಥಾಪನೆಗಾಗಿ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಉದ್ಯಮಿಗಳಿಗೆ ಹಂಚಿಕೆ ಮಾಡಿದ ನಂತರ ಡಿನೋಟೀಫಿಕೇಷನ್ ಮಾಡಲಾಗಿದೆ. ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ತಮ್ಮ ವಿರುದ್ಧ ದೂರು ದಾಖಲಿಸಿರುವುದು ಕಾನೂನುಬಾಹಿರ ಕ್ರಮವಾಗಿರುವ ಕಾರಣ ಪ್ರಕರಣವನ್ನು ರದ್ದುಪಡಿಸಬೇಕೆಂಬ ಯಡಿಯೂರಪ್ಪನವರ ಕೋರಿಕೆಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಕೂಡಲೇ ಅವರು ರಾಜೀನಾಮೆ ನೀಡಬೇಕು’ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ADVERTISEMENT

‘ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ’ ಎಂದು ಘೋಷಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವರದ್ದೇ ಪಕ್ಷಕ್ಕೆ ಸೇರಿರುವ ಮುಖ್ಯಮಂತ್ರಿ ಮೇಲಿನ ಈ ಆರೋಪ ಕಣ್ಣಿಗೆ ಕಾಣಿಸುತ್ತಿಲ್ಲವೇ ಎಂದು ಸಿದ್ದರಾಮಯ್ಯ ಕುಟುಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.