ADVERTISEMENT

ಮತಾಂತರ ನಿಷೇಧ: ಸುಗ್ರೀವಾಜ್ಞೆ ತಿರಸ್ಕಾರಿಸಿ: ಸಿದ್ದರಾಮಯ್ಯ ಆಗ್ರಹ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಮೇ 2022, 23:00 IST
Last Updated 13 ಮೇ 2022, 23:00 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದವರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ಉದ್ದೇಶದಿಂದ ಬಿಜೆಪಿ ಸರ್ಕಾರವು ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿದ್ದು, ಅದನ್ನು ರಾಜ್ಯಪಾಲರು ತಿರಸ್ಕರಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ರಾಜ್ಯದ ಬಿಜೆಪಿ ಸರ್ಕಾರ ನಿತ್ಯವೂ ಬೆತ್ತಲೆಯಾಗುತ್ತಿದೆ. ಈ ಸಂದರ್ಭದಲ್ಲಿ ಜನರ ಗಮನವನ್ನು ಬೇರೆಡೆ ಸೆಳೆಯುವುದಕ್ಕಾಗಿ ಮತಾಂತರ ನಿಷೇಧ ಕಾಯ್ದೆಯ ಜಾರಿಗೆ ಸುಗ್ರೀವಾಜ್ಞೆ ತರಲು ಹೊರಟಿದೆ’ ಎಂದು ಟೀಕಿಸಿದ್ದಾರೆ.

‘ಆಮಿಷ, ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲಾತ್ಕಾರದ ಮತಾಂತರಗಳನ್ನು ತಡೆಯಲು ಈಗಾಗಲೇ ನಮ್ಮಲ್ಲಿ ಜಾರಿಯಲ್ಲಿರುವ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ `ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಸಹಬಾಳ್ವೆ- ಸೌಹಾರ್ದ ಪರಂಪರೆಯ ಹಿಂದೂ ಧರ್ಮದ ನೈಜ ಅನುಯಾಯಿಗಳಾಗಿರುವವರು ಇಂತಹದ್ದೊಂದು ಅನಗತ್ಯ ಕಾಯ್ದೆಗೆ ಒತ್ತಾಯಿಸಿಲ್ಲ. ಇದನ್ನು ಒಪ್ಪುವುದೂ ಇಲ್ಲ. ಇದು ಸಂಘ ಪರಿವಾರದ ರಾಜಕೀಯ ಹಿಂದುತ್ವದ ಕಾರ್ಯಸೂಚಿಯಾಗಿದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

‘ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಅಲ್ಪಸಂಖ್ಯಾತರು ಮತ್ತು ಅವರ ಪೂಜಾ ಸ್ಥಳಗಳ ಮೇಲೆ ದಾಳಿ ನಡೆಯವುದಕ್ಕೆ ದೇಶ ಸಾಕ್ಷಿಯಾಗಿದೆ. ಕರ್ನಾಟಕದಲ್ಲಿ ಚರ್ಚ್‌ಗಳ ಮೇಲೆ ನಡೆದಿರುವ ದಾಳಿಯಿಂದ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ. ತರಾತುರಿಯ ಮತಾಂತರ ನಿಷೇಧ ಕಾಯ್ದೆ ಇಂತಹ ದಾಳಿಗೆ ದುಷ್ಕರ್ಮಿಗಳ ಕೈಗೆ ನೀಡುವ ಆಯುಧವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪ್ರಶ್ನಿಸಿದ್ದಾರೆ.

ಸ್ವಇಚ್ಛೆಯಿಂದ ಮತಾಂತರಗೊಳ್ಳುವ ಹಕ್ಕನ್ನು ಸಂವಿಧಾನವೇ ನೀಡಿದೆ. ಮತಾಂತರ ನಿಯಂತ್ರಣಕ್ಕೆ ಇರುವ ಕಾನೂನನ್ನು ಜಾರಿಗೆ ತರುವ ಪೊಲೀಸ್ ಇಲಾಖೆ ಮತ್ತು ತಪ್ಪು- ಒಪ್ಪುಗಳ ನ್ಯಾಯ ಒದಗಿಸುವ ನ್ಯಾಯಾಂಗದ ಮೇಲೆ ರಾಜ್ಯ ಸರ್ಕಾರಕ್ಕೆ ನಂಬಿಕೆ ಇಲ್ಲವೆ ಎಂದು ಕೇಳಿದ್ದಾರೆ.

‘ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ಕಾಯ್ದೆಯನ್ನು ದುರುಪಯೋಗ ಮಾಡಿಕೊಳ್ಳಲು ಕಾಂಗ್ರೆಸ್‌ ಪಕ್ಷವು ಅವಕಾಶ ನೀಡುವುದಿಲ್ಲ. ಅನ್ಯಾಯ ಮತ್ತು ದೌರ್ಜನ್ಯಕ್ಕೊಳಗಾಗುವ ಪ್ರತಿಯೊಬ್ಬ ಅಲ್ಪಸಂಖ್ಯಾತರ ಜತೆ ತಮ್ಮ ಪಕ್ಷ ನಿಲ್ಲಲಿದೆ. ಈ ಕಾಯ್ದೆಯ ವಿರುದ್ದ ಕಾಂಗ್ರೆಸ್‌ ಪಕ್ಷ ಜನಾಂದೋಲನ ನಡೆಸಲಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.