ADVERTISEMENT

ಅಕ್ರಮ ಗಣಿಗಾರಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಿದೆ: ಸಿದ್ಧರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಜನವರಿ 2021, 5:17 IST
Last Updated 22 ಜನವರಿ 2021, 5:17 IST
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ   

ಶಿವಮೊಗ್ಗ: ಶಿವಮೊಗ್ಗದಲ್ಲಿ ಕ್ರಷರ್ ಬಳಿ ಡೈನಾಮೈಟ್ ಸ್ಫೋಟಗೊಂಡು ಹಲವು ಮಂದಿ ಸಾವಿಗೀಡಾದ ಪ್ರಕರಣದ ಬಗ್ಗೆ ಸಂತಾಪ ಸೂಚಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಅಕ್ರಮ ಗಣಿಗಾರಿಕೆ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.

'ಶಿವಮೊಗ್ಗ ನಗರ ಸಮೀಪ ಜಿಲೆಟಿನ್ ಸ್ಪೋಟಗೊಂಡು ಹಲವು ಮಂದಿ ಕಾರ್ಮಿಕರು ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. ಈ ಪ್ರಕರಣವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು' ಎಂದು ಸಿದ್ಧರಾಮಯ್ಯ ಟ್ವೀಟ್ ಮಾಡಿದರು.

ಮೃತರ ಶೋಕತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಮತ್ತು ಮೃತ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ಅವಘಡಕ್ಕೆ ಕಾರಣವಾದ ಮತ್ತು ಅಕ್ರಮ ಗಣಿಗಾರಿಕೆ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಸಿದ್ಧರಾಮಯ್ಯ ಮನವಿ ಮಾಡಿದರು.

'ನಿರ್ಲಕ್ಷ್ಯ ತೋರುವ ಮೂಲಕ ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಸಿಎಂ ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತೇನೆ. ರಾಜ್ಯದ ಹಲವೆಡೆ ಅಕ್ರಮ ಗಣಿಗಾರಿಕೆ ನಿರಾತಂಕವಾಗಿ ನಡೆಯುತ್ತಿರುವ ಆರೋಪ ಕೇಳಿಬರುತ್ತಿದ್ದು, ಅವುಗಳ ಮೇಲೆ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಿದೆ' ಎಂದು ಒತ್ತಾಯಿಸಿದರು.

ಗುರುವಾರ ರಾತ್ರಿ ಅಬ್ಬಲಗೆರೆ-ಹುಣಸೋಡು ಮಧ್ಯ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಸ್ಫೋಟಿಸಿ ಬಿಹಾರ ಮೂಲದ ಸುಮಾರು 15 ಕಾರ್ಮಿಕರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.