ಸಿದ್ದರಾಮಯ್ಯ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ನಿವೇಶನ ಪಡೆದಿದ್ದಾರೆಂದು ಆರೋಪಿಸಲಾದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಬಿ.ಎಂ.ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾನ್ಯ ಮಾಡಿದೆ. ಹೀಗಾಗಿ, ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಸದ್ಯಕ್ಕೆ ನಿರಾಳರಾಗಿದ್ದಾರೆ.
‘ಬಿ’ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಪ್ರತಿಭಟನಾ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ತಿರಸ್ಕರಿಸಿ, ಆದೇಶಿಸಿದ್ದಾರೆ.
‘ಸಿದ್ದರಾಮಯ್ಯ, ಬಿ.ಎಂ.ಪಾರ್ವತಿ, ಅವರ ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ ಮತ್ತು ಆಕ್ಷೇಪಾರ್ಹ ಜಮೀನಿನ ಮಾಲೀಕ ಜೆ.ದೇವರಾಜ್ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ‘ಬಿ’ ಅಂತಿಮ ವರದಿಯನ್ನು ಒಪ್ಪಿಕೊಳ್ಳಲಾಗಿದೆ.
ತನಿಖಾಧಿಕಾರಿ ಉದೇಶ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಲಾಗಿದೆ. ಬಾಧಿತ ವ್ಯಕ್ತಿಯಾಗಿ, ಜಾರಿ ನಿರ್ದೇಶನಾಲಯ (ಇ.ಡಿ) ಮಧ್ಯಪ್ರವೇಶಿಸುವ ಅಧಿಕಾರವನ್ನು ಸೀಮಿತ ವ್ಯಾಪ್ತಿಗೆ ಒಳಪಡಿಸಲಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.
‘ಮುಚ್ಚಿದ ಲಕೋಟೆಯಲ್ಲಿ ಇರಿಸಲಾದ ತನಿಖಾ ವರದಿ ಮತ್ತು ದಾಖಲೆಗಳನ್ನು ತನಿಖಾಧಿಕಾರಿಗೆ ಒಪ್ಪಿಸಲು ನಿರ್ದೇಶಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಫೆಬ್ರುವರಿ 9ಕ್ಕೆ ಮುಂದೂಡಿದರು. ದೂರುದಾರ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಪರ ವೆಂಕಟೇಶ ಅರಬಟ್ಟಿ ಮತ್ತು ಸಿದ್ದರಾಮಯ್ಯ ಪರ ಹೈಕೋರ್ಟ್ ವಕೀಲ ಶತಭಿಷ ಶಿವಣ್ಣ ಹಾಜರಿದ್ದರು.
ಪ್ರಕರಣದ ಬೆಳವಣಿಗೆ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿತ್ತು. ಇದರನ್ವಯ 2024ರ ಸೆಪ್ಟೆಂಬರ್ 27ರಂದು ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ‘ಸಿದ್ದರಾಮಯ್ಯ, ಬಿ.ಎಂ.ಪಾರ್ವತಿ, ಮಲ್ಲಿಕಾರ್ಜುನ ಹಾಗೂ ಜೆ.ದೇವರಾಜು ವಿರುದ್ಧ ಅಪರಾಧ ಸಾಬೀತುಪಡಿಸುವ ಯಾವುದೇ ಅಂಶಗಳಿಲ್ಲ’ ಎಂದು 2025ರ ಫೆಬ್ರುವರಿ 20ರಂದು ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು.
ಇದನ್ನು ಪ್ರಶ್ನಿಸಿ 2025ರ ಮಾರ್ಚ್ 18ರಂದು ಸ್ನೇಹಮಯಿ ಕೃಷ್ಣ ಪ್ರತಿಭಟನಾ ಅರ್ಜಿ ಸಲ್ಲಿಸಿದ್ದರು. 2025ರ ಏಪ್ರಿಲ್ 2ರಂದು ಜಾರಿ ನಿರ್ದೇಶನಾಲಯವೂ ಪ್ರತಿಭಟನಾ ಅರ್ಜಿ ಸಲ್ಲಿಸಿತ್ತು.
‘ಸಿದ್ದರಾಮಯ್ಯ ಮತ್ತು ಬಿ.ಎಂ.ಪಾರ್ವತಿ ಅವರು ಮುಡಾದಲ್ಲಿ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಎಸ್‌ಐಟಿ (ವಿಶೇಷ ತನಿಖಾ ದಳ) ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು’ ಎಂದು ಕೋರಿ ಸ್ನೇಹಮಯಿ ಕೃಷ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ 2024ರ ಆಗಸ್ಟ್ 8ರಂದು ಖಾಸಗಿ ದೂರು ದಾಖಲಿಸಿದ್ದರು.
ಇದರ ಬೆನ್ನಲ್ಲೇ, ರಾಜ್ಯಪಾಲರು ಸಿದ್ದರಾಮಯ್ಯ ಮತ್ತು ಇತರೆ ಆರೋಪಿಗಳ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದರು. ಸಿದ್ದರಾಮಯ್ಯ ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ರಾಜ್ಯಪಾಲರ ನಿರ್ಣಯವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ರಾಜ್ಯಪಾಲರ ನಿರ್ಣಯ ಎತ್ತಿ ಹಿಡಿದಿರುವ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಸಿದ್ದರಾಮಯ್ಯ ಮತ್ತು ಇತರರು ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಮೂಲಕ ಪ್ರಶ್ನಿಸಿದ್ದಾರೆ. ಈ ಅರ್ಜಿ ವಿಚಾರಣಾ ಹಂತದಲ್ಲಿದೆ. ಏತನ್ಮಧ್ಯೆ, ಬಿ.ಎಂ.ಪಾರ್ವತಿ ಅವರು ತಮಗೆ ಹಂಚಿಕೆ ಮಾಡಲಾಗಿದ್ದ 14 ನಿವೇಶನಗಳನ್ನು ಮುಡಾಕ್ಕೆ ಹಿಂದಿರುಗಿಸಿದ್ದರು. ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ನಿರಾಕರಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.