ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ರಾಜಭವನದಲ್ಲಿ ಭಾನುವಾರ ಭೇಟಿ ಮಾಡಿ ಚರ್ಚೆ ನಡೆಸಿದರು.
ರಾಷ್ಟ್ರಪತಿಯ ಅಂಕಿತಕ್ಕೆ ಕಾದಿರಿಸಿ ಹಿಂದಿರುಗಿಸಿದ್ದ, ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆಯಲ್ಲಿ ಶೇ 4 ಮೀಸಲು ಕಲ್ಪಿಸಲು ಅವಕಾಶ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿನ ಪಾರದರ್ಶಕತೆ (ಕೆಟಿಟಿಪಿ) ತಿದ್ದುಪಡಿ ಮಸೂದೆಯನ್ನು ಪುನರ್ ಪರಿಶೀಲಿಸುವಂತೆ ಕೋರಿ ಮತ್ತೊಮ್ಮೆ ರಾಜ್ಯಪಾಲರಿಗೆ ಕಳುಹಿಸಲಾಗಿದೆ.
ಇದೇ ವೇಳೆ ಮುಜರಾಯಿ ಇಲಾಖೆಯ ವ್ಯಾಪ್ತಿಯ ಶ್ರೀಮಂತ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ‘ಸಾಮಾನ್ಯ ಸಂಗ್ರಹಣಾ ನಿಧಿ’ಯನ್ನು ಆದಾಯ ಇಲ್ಲದಿರುವ ‘ಸಿ’ ವರ್ಗದ ದೇವಸ್ಥಾನಗಳಿಗೆ ಬಳಸುವುದನ್ನು ಕಡ್ಡಾಯಗೊಳಿಸುವ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆಯನ್ನು ರಾಷ್ಟ್ರಪತಿಯ ಅಂಕಿತಕ್ಕೆ ಕಾದಿರಿಸಿ ರಾಜ್ಯಪಾಲರು ಹಿಂದಿರುಗಿಸಿದ್ದಾರೆ. ಆ ಬೆನ್ನಲ್ಲೆ ಇಬ್ಬರ ಭೇಟಿ ಕುತೂಹಲ ಮೂಡಿಸಿದೆ.
ಕರ್ನಾಟಕ ಸಹಕಾರಿ ಸಂಘಗಳ (ತಿದ್ದುಪಡಿ) ಮಸೂದೆ ಮತ್ತು ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆಯನ್ನೂ ರಾಷ್ಟ್ರಪತಿಯ ಅಂಕಿತಕ್ಕೆ ಕಾದಿರಿಸಿ ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಮಾಡಿದ್ದಾರೆ.
ಕೇಂದ್ರಕ್ಕೆ ವ್ಯತಿರಿಕ್ತವಾಗಿರದ ಮತ್ತು ರಾಜ್ಯಕ್ಕೆ ಸಂಬಂಧಿಸಿದ ಕಾಯ್ದೆಗಳ ತಿದ್ದುಪಡಿಗೆ ರೂಪಿಸಿದ ಮಸೂದೆಗಳನ್ನು ರಾಷ್ಟ್ರಪತಿಯ ಅನುಮೋದನೆಗೆ ಕಳುಹಿಸುವ ಅಗತ್ಯ ಇಲ್ಲವೆಂದು ತಮಿಳುನಾಡು ಸರ್ಕಾರ ಮತ್ತು ಅಲ್ಲಿನ ರಾಜ್ಯಪಾಲರ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿತ್ತು. ಈ ಕಾರಣಕ್ಕೆ ಈ ಎರಡೂ ಮಸೂದೆಗಳನ್ನು ಕೂಡಾ ಪುನರ್ ಪರಿಶೀಲಿಸುವಂತೆ ಕೋರಿ ಮತ್ತೊಮ್ಮೆ ರಾಜ್ಯಪಾಲರಿಗೆ ಕಳುಹಿಸಲು ಸಂಸದೀಯ ಇಲಾಖೆ ಮುಂದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.