ADVERTISEMENT

ದಂಡ: ಸಿದ್ದರಾಮಯ್ಯ ಸುಪ್ರೀಂ ಕೋರ್ಟ್‌ ಮೊರೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2024, 16:14 IST
Last Updated 14 ಫೆಬ್ರುವರಿ 2024, 16:14 IST
<div class="paragraphs"><p>ಸುಪ್ರೀಂ ಕೋರ್ಟ್‌ </p></div>

ಸುಪ್ರೀಂ ಕೋರ್ಟ್‌

   

ನವದೆಹಲಿ: ತಮ್ಮ ಹಾಗೂ ಇತರ ನಾಯಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣದ ಸಿಂಧುತ್ವ ಹಾಗೂ ₹10 ಸಾವಿರ ದಂಡ ವಿಧಿಸಿರುವ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ. 

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಕೆ.ಎಸ್‌. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಡೆಸಲಾಗಿದ್ದ ಪ್ರತಿಭಟನೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ, ರಾಮಲಿಂಗಾರೆಡ್ಡಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್ ಸುರ್ಜೇವಾಲಾ ವಿರುದ್ಧದ ಕ್ರಿಮಿನಲ್ ಪ್ರಕರಣ ವಜಾಗೊಳಿಸಲು ಹೈಕೋರ್ಟ್ ಫೆಬ್ರುವರಿ 6ರಂದು ನಿರಾಕರಿಸಿತ್ತು. 

ADVERTISEMENT

‘ಪ್ರಕರಣದಲ್ಲಿ ಪೊಲೀಸ್‌ ಅಧಿಕಾರಿಯನ್ನು ಯಾವುದೇ ಸಮರ್ಥನೆ ನೀಡದೆ ಪ್ರತಿವಾದಿಯನ್ನಾಗಿ ಹೆಸರಿಸಲಾಗಿದೆ’ ಎಂಬ ಕಾರಣಕ್ಕೆ ಎಲ್ಲ ಅರ್ಜಿದಾರರಿಗೂ ತಲಾ ₹ 10 ಸಾವಿರ ದಂಡ ವಿಧಿಸಿತ್ತು. 

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ 2022ರ ಏಪ್ರಿಲ್ 14ರಂದು ಬೆಂಗಳೂರಿನ ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್‌ ಮುಖಂಡರು ಪ್ರತಿಭಟನೆ ನಡೆಸಿದ್ದರು.

ಈ ವೇಳೆ ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸಿದ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಅಡಿಯಲ್ಲಿ ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಅರ್ಜಿದಾರರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 143 (ಕಾನೂನು ಬಾಹಿರವಾಗಿ ಸಮಾವೇಶಗೊಳ್ಳುವುದು) ಮತ್ತು ಕರ್ನಾಟಕ ಪೊಲೀಸ್‌ ಕಾಯ್ದೆಯ ಕಲಂ 103ರ ಅಡಿ ಪ್ರಕರಣ ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.