ADVERTISEMENT

ಸ್ಥಳೀಯ ಸಂಸ್ಥೆ ಒಬಿಸಿ ಮೀಸಲಾತಿ: ಅನ್ಯಾಯವಾದರೆ ಸರ್ಕಾರವೇ ಹೊಣೆ-ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 11 ಮೇ 2022, 20:42 IST
Last Updated 11 ಮೇ 2022, 20:42 IST
   

ಬೆಂಗಳೂರು: ಸುಪ್ರೀಂಕೋರ್ಟ್‌ ಆದೇಶದಿಂದ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗ ಗಳಿಗೆ ಅನ್ಯಾಯವಾದರೆ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಸಿದ್ದರಾಮಯ್ಯ ಅವರು, ‘ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಆದೇಶದಿಂದ ಸಾಮಾಜಿಕ ನ್ಯಾಯದ ಅಸ್ತಿತ್ವಕ್ಕೆ ಧಕ್ಕೆ ಉಂಟಾಗುವ ಪರಿಸ್ಥಿತಿ ನಿರ್ಮಾಣ ವಾಗಿದೆ. ಪರಿಸ್ಥಿತಿ ಕೈಮೀರಿ ಹೋಗುವ ಮೊದಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ಸುಪ್ರೀಂಕೋರ್ಟ್‌ ಮಂಗಳವಾರ ನೀಡಿರುವ ಆದೇಶದಿಂದ ಸೃಷ್ಟಿ ಯಾಗಿರುವ ಬಿಕ್ಕಟ್ಟಿಗೆ ಪರಿಹಾರ ಪಡೆಯಲು ಸರ್ಕಾರ ಮುಂದಾಗಬೇಕು. ಹಿಂದುಳಿದ ವರ್ಗಗಳ ಆಯೋಗದ ವರದಿ ಆಧರಿಸಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ಖಾತರಿಪಡಿಸಿ, ಅದರ ಆಧಾರದಲ್ಲಿ ಚುನಾವಣೆ ನಡೆಸಲು ಸುಪ್ರೀಂಕೋರ್ಟ್‌ ಅನುಮತಿ ಕೋರುವುದೊಂದೇ ಈಗ ಇರುವ ಮಾರ್ಗ ಎಂದಿದ್ದಾರೆ.

ADVERTISEMENT

ಈ ವಿಚಾರದಲ್ಲಿ ಕಾನೂನು ಹೋರಾಟಕ್ಕೆ ಸರ್ಕಾರ ತಕ್ಷಣ ಸಜ್ಜಾಗಬೇಕು. ವಿರೋಧ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು. ಹಿಂದುಳಿದ ವರ್ಗಗಳ ಆಯೋಗವು ಸಂಗ್ರಹಿಸಿರುವ ವಿಶ್ವಾ ಸಾರ್ಹ ದತ್ತಾಂಶಗಳನ್ನು ಬಳಸಿಕೊಂಡು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಗುರುತಿಸಲು ಮೂರು ಹಂತದ ಪರಿಶೀಲನೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಜಾತಿಗಳ ಜನರ ರಾಜಕೀಯ ಹಿಂದುಳಿದಿರುವಿಕೆಯನ್ನು ತಕ್ಷಣವೇ ಗುರುತಿಸಲು ಸಾಧ್ಯವಾಗದಿದ್ದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮಾತ್ರ ಮೀಸಲಾತಿ ನೀಡಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸು
ವಂತೆ ಸುಪ್ರೀಂಕೋರ್ಟ್‌ ಹಿಂದೆಯೇ ಹೇಳಿತ್ತು. ಈಗ ಅದೇ ಮಾತನ್ನು ಪುನರುಚ್ಚರಿಸಿದೆ. ಈ ಆದೇಶ ದೇಶದಾದ್ಯಂತ ಅನ್ವಯ ಆಗಲಿದೆ ಎಂಬುದನ್ನೂ ಮತ್ತೊಮ್ಮೆ ಹೇಳಿದೆ. ಆದರೆ, ರಾಜ್ಯ ಸರ್ಕಾರ ಈ ವಿಚಾರದಲ್ಲಿ ಕಾನೂನು ಹೋರಾಟಕ್ಕೆ ಮುಂದಾಗದಿರುವುದು ವಿಷಾದನೀಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘ಮೀಸಲಾತಿ ಕೊಟ್ಟೇ ಚುನಾವಣೆಗೆ ಸಿದ್ಧ’

ಮಂಗಳೂರು: ‘ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗದವರಿಗೆ ಶೇ 33 ಕ್ಕಿಂತ ಹೆಚ್ಚಿನ ಮೀಸಲಾತಿಯನ್ನು ನೀಡುವ ಮೂಲಕವೇ ನಾವು ಚುನಾವಣೆ ಎದುರಿಸಲು ಸಿದ್ಧರಿದ್ದೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಬುಧವಾರ ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೂರು ಹಂತದ ಪರಿಶೀಲನೆ ಪೂರ್ಣಗೊಳ್ಳುವವರೆಗೆ, ಹಿಂದುಳಿದ ವರ್ಗಗಳಿಗೆ ಮೀಸಲಾದ ಸ್ಥಾನಗಳನ್ನು ಸಾಮಾನ್ಯ ವರ್ಗಕ್ಕೆ ನೀಡಿ ಅಧಿಸೂಚನೆ ಹೊರಡಿಸಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ನಾವು ಹಿಂದುಳಿದ ವರ್ಗಕ್ಕೆ ಸೇರಿದ ಸ್ಥಾನಗಳನ್ನು ಅವರಿಗೇ ಮೀಸಲಿಟ್ಟೇ ಚುನಾವಣೆ ಎದುರಿಸಲು ಸಿದ್ಧರಾಗಿದ್ದೇವೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಹಿಂದುಳಿದ ವರ್ಗದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ನೀಡಿದೆ. ಆದ್ದರಿಂದ ಮೀಸಲಾತಿ ನೀಡುವುದರಿಂದ ಪಕ್ಷಕ್ಕೆ ಚುನಾವಣೆಯಲ್ಲಿ ಯಾವುದೇ ತೊಡಕು ಆಗುವುದಿಲ್ಲ’ ಎಂದು ಹೇಳಿದರು.

ಎಲ್ಲಾ ಸಮುದಾಯದವರನ್ನು ಪ್ರತಿನಿಧಿಸುವ ‘ಪಂಚರತ್ನ ಸಮಿತಿ’ಯನ್ನೂ ರೂಪಿಸಲಾಗಿದೆ. ಸುಪ್ರೀಂ ಕೋರ್ಟ್‌ ತೀರ್ಪಿನ ಆಧಾರದಲ್ಲಿ ಆಯೋಗವು ಚುನಾವಣಾ ದಿನಾಂಕ ಘೋಷಣೆ ಮಾಡುವುದನ್ನು ಕಾಯುತ್ತಿದ್ದೇವೆ’ ಎಂದರು.

‘ಸಮಸ್ಯೆ ಉದ್ಭವಿಸುತ್ತಿರಲಿಲ್ಲ’

ಮೈಸೂರು: ‘ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ತಯಾರಿಸಿದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಆಧರಿಸಿ ಚುನಾವಣೆ ಮಾಡಬಹುದಿತ್ತು. ಸರ್ಕಾರ ವರದಿಯನ್ನು ಸ್ವೀಕರಿಸಿ, ಸುಪ್ರೀಂ ಕೋರ್ಟ್‌ಗೆ ಅರ್ಜಿ ಹಾಕಿ ಚುನಾವಣೆ ಮಾಡಬಹುದು. ನಮ್ಮ ವರದಿ ಸ್ವೀಕರಿಸಿದ್ದರೆ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.