ADVERTISEMENT

ಪರಿಶಿಷ್ಟರ ಮೇಲೆ ದೌರ್ಜನ್ಯ: 60 ದಿನಗಳಲ್ಲಿ ಆರೋಪ ಪಟ್ಟಿ ಸಲ್ಲಿಸಬೇಕು: ಸಿಎಂ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2025, 8:04 IST
Last Updated 25 ಆಗಸ್ಟ್ 2025, 8:04 IST
   

ಬೆಂಗಳೂರು: 'ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು. ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದೆ, ಆದರೆ, ಕಳೆದ ಆರು ತಿಂಗಳಲ್ಲಿ ಶೇ 84 ರಷ್ಟು ಪ್ರಕರಣಗಳಲ್ಲಿ ಮಾತ್ರ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ನ್ಯಾಯಾಲಯದಲ್ಲಿ 56 ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.

ADVERTISEMENT

ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ10ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವಿಕಲತೆ ಉಂಟಾದರೆ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಸುಳ್ಳು ಜಾತಿ ಪ್ರಮಾಣಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದೂ ಹೇಳಿದರು.

ಸಚಿವರಾದ ಎಚ್.ಕೆ.ಪಾಟೀಲ್, ಎಚ್.ಸಿ.ಮಹದೇವಪ್ಪ, ಆರ್.ಬಿ.ತಿಮ್ಮಾಪುರ , ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.