ADVERTISEMENT

ಮೋದಿಯವರೇ ಬಡಾಯಿಯನ್ನು ಬಿಡಿ, ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2021, 8:49 IST
Last Updated 25 ಏಪ್ರಿಲ್ 2021, 8:49 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಲಸಿಕೆ‌ ಪಡೆಯುವುದನ್ನು ಪ್ರೊತ್ಸಾಹಿಸಬೇಕಾದ ಬಿಜೆಪಿ ಸರ್ಕಾರ, ಅದರ ಬೆಲೆ ಏರಿಸಿ ಜನತೆ ಅದನ್ನು ಪಡೆಯದಂತೆ ಮಾಡಲು ಹೊರಟಿದೆ. ನರೇಂದ್ರ ಮೋದಿಯವರೇ 'ಟೀಕಾ ಉತ್ಸವ್' ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅನ್ನಭಾಗ್ಯ ಯೋಜನೆ ಎಂದರೆ ಉರಿದುಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ ಬಿಜೆಪಿ ನಾಯಕರು, ಈಗ ಪ್ರಧಾನಿ ಘೋಷಿಸಿರುವ ಎರಡು ತಿಂಗಳ ಕಾಲ ಐದು ಕಿಲೋ ಅಕ್ಕಿ ನೀಡುವ ಯೋಜನೆಯನ್ನು ಕೊಂಡಾಡುತ್ತಿರುವುದು ತಮಾಷೆಯಾಗಿದೆ ಎಂದಿದ್ದಾರೆ.

ಕೊರೊನಾದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಹತ್ತು ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಪ್ರಧಾನಿ ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೊನಾ‌ ಕಷ್ಟ ಕೊನೆಯಾಗುವ ವರೆಗಾದರೂ ಹತ್ತು ಕಿಲೋ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ ಎಂದು ಹೇಳಿದ್ದಾರೆ.

ADVERTISEMENT

ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸಲು ಶತಪ್ರಯತ್ನ ಮಾಡುತ್ತಿರುವ ರಾಜ್ಯ ಸರ್ಕಾರ ಹಲವಾರು ಜಿಲ್ಲೆಗಳಲ್ಲಿ ತಿಂಗಳಿಗೆ ಐದು‌ ಕಿಲೋ ಅಕ್ಕಿ ಬದಲಿಗೆ ಎರಡು ಕಿಲೋ ಅಕ್ಕಿ ನೀಡುತ್ತಿದೆ. ಮುಖ್ಯಮಂತ್ರಿಯವರೇ ಈ ಅನ್ಯಾಯವನ್ನು ತಕ್ಷಣ ಸರಿಪಡಿಸಿ. ಬಡವರ ಶಾಪಕ್ಕೆ ಈಡಾಗಬೇಡಿ ಎಂದು ತಿಳಿಸಿದ್ದಾರೆ.

ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಅವೆಲ್ಲವನ್ನೂ ಬಡವರ ವಿರೋಧಿ ಬಿಜೆಪಿ ಸರ್ಕಾರ ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು. ಔಷಧಿ,‌ ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು‌ ಪ್ರಧಾನಿ ಅವರನ್ನು ಬೇಡುತ್ತಿರುವ ಮುಖ್ಯಮಂತ್ರಿಯನ್ನು ಕಂಡಾಗ‌ ಕನಿಕರ ಮೂಡುತ್ತಿದೆ. ಬಿಜೆಪಿಯ 25 ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.