
ಬೆಂಗಳೂರು: ‘ಸರ್ಕಾರಿ ಉದ್ಯೋಗ ಪಡೆದು ನೆಮ್ಮದಿಯ ಬದುಕು ಕಟ್ಟಿಕೊಳ್ಳಬೇಕೆಂಬ ಕನಸು ಹೊತ್ತಿರುವ ಉದ್ಯೋಗಾಕಾಂಕ್ಷಿಗಳ ಆಸೆ - ಆಕಾಂಕ್ಷೆಯನ್ನು ರಕ್ಷಿಸಿ, ಅರ್ಹರಿಗೆ ಸೂಕ್ತ ಉದ್ಯೋಗ ಖಚಿತಪಡಿಸಲು ನಮ್ಮ ಸರ್ಕಾರ ಬದ್ಧ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಮಂಗಳವಾರ ನಡೆಸಿದ ಪ್ರತಿಭಟನೆಯನ್ನು ಉಲ್ಲೇಖಿಸಿ ಹೇಳಿಕೆ ನೀಡಿರುವ ಅವರು, ‘ಈ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ, ಅನಿಶ್ಚಿತತೆಯನ್ನು ಅರ್ಥಮಾಡಿಕೊಳ್ಳಬಲ್ಲೆ’ ಎಂದಿದ್ದಾರೆ.
‘ನಾವು (ಕಾಂಗ್ರೆಸ್) ಅಧಿಕಾರಕ್ಕೆ ಬಂದಾಗ 2.64 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇದ್ದವು. ಹಿಂದಿನ ಬಿಜೆಪಿ ಸರ್ಕಾರ ಸಕಾಲದಲ್ಲಿ ನೇಮಕಾತಿಗಳನ್ನು ಆರಂಭಿಸದಿರುವುದು ಮತ್ತು ಹುದ್ದೆಗಳನ್ನು ಭರ್ತಿ ಮಾಡಲು ಸೂಕ್ತ ಯೋಜನೆ ರೂಪಿಸದ ಕಾರಣ ದೊಡ್ಡ ಸಂಖ್ಯೆಯಲ್ಲಿ ಹುದ್ದೆಗಳು ಖಾಲಿ ಉಳಿದಿವೆ’ ಎಂದಿದ್ದಾರೆ.
‘ವಿರೋಧ ಪಕ್ಷದ ನಾಯಕರು ನಿರಪರಾಧಿ ವಿದ್ಯಾರ್ಥಿಗಳಿಗೆ ತಪ್ಪು ಮಾರ್ಗದರ್ಶನ ಮಾಡಿ ತಮ್ಮ ರಾಜಕೀಯ ಸ್ವಾರ್ಥದ ಈಡೇರಿಕೆಗಾಗಿ ಬಳಸಿಕೊಳ್ಳುತ್ತಿದ್ದಾರೆ. ಉದ್ಯೋಗದ ನಿರೀಕ್ಷೆಯಲ್ಲಿರುವ ಯುವ ಜನರನ್ನು ಉಜ್ವಲ ಭವಿಷ್ಯದ ಕಡೆ ಯೋಚಿಸಲು ಪ್ರೇರೇಪಿಸುವ ಬದಲು, ಅವರ ಮೂಲಕ ಅಶಾಂತಿ ಉಂಟು ಮಾಡಲು ಹೊರಟಿರುವ ಈ ನಡೆ ಖಂಡನೀಯ’ ಎಂದು ಟೀಕಿಸಿದ್ದಾರೆ.
‘ಬಿಜೆಪಿ ಸರ್ಕಾರದ ಅವಧಿಯಲ್ಲಿ (2019–2023) ನೇಮಕಾತಿಯಲ್ಲಿ ನಡೆದ ಅಕ್ರಮಗಳು ಮತ್ತು ಭ್ರಷ್ಟಾಚಾರಗಳು ಇಂದಿನ ಈ ದುಸ್ಥಿತಿಗೆ ಕಾರಣ. ನ್ಯಾಯಾಲಯದಲ್ಲಿ ಪ್ರಕರಣಗಳು ನಡೆಯುತ್ತಿದ್ದ ಕಾರಣದಿಂದ ಹಲವು ನೇಮಕಾತಿ ಪ್ರಕ್ರಿಯೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಯಿತು. ಈ ವಿಳಂಬದಿಂದ ಅರ್ಹ ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗದಂತೆ ತಡೆಯಲು ಮುಂಬರುವ ನೇಮಕಾತಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷ ಸಡಿಲಿಸಲಾಗಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.