ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಅಧಿಕಾರಿಗಳ ವಿರುದ್ಧ ಹಲವು ಬಾರಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಎನ್. ರವಿಕುಮಾರ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳ ವಿರುದ್ಧ ಸಿದ್ದರಾಮಯ್ಯ ಅವಹೇಳನಕಾರಿಯಾಗಿ ಮಾತನಾಡಿದ್ದರು. ರಾಷ್ಟ್ರಪತಿಗೆ ಗೌರವ ಕೊಡದೆ, ಏಕವಚನದಲ್ಲೇ ಮಾತಾಡಿದ್ದರು. ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸುವ ಪೊಲೀಸರು, ಅದೇ ಕೆಲಸ ಕಾಂಗ್ರೆಸ್ ನಾಯಕರು ಮಾಡಿದರೆ ಕ್ರಮ ಕೈಗೊಳ್ಳುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಬೇರೆ ಕಾನೂನು ಇದೆಯೇ? ರವಿಕುಮಾರ್ ಯಾವ ರೀತಿಯ ಅಶ್ಲೀಲ ಹೇಳಿಕೆ ನೀಡಿದ್ದಾರೆ ಎಂಬುದನ್ನು ಕಾಂಗ್ರೆಸ್ ಸ್ಪಷ್ಟಪಡಿಸಲಿ ಎಂದರು.
ರಾಜ್ಯದಲ್ಲಿ ಎಲ್ಲೂ ಅಭಿವೃದ್ಧಿ ಕಾರ್ಯ ನಡೆಯದೆ, ಶಾಸಕರು ದಂಗೆ ಏಳುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಹೈಕೋರ್ಟ್ ಸೂಚಿಸಿದೆ. ಈ ಸಮಸ್ಯೆಗಳನ್ನು ಮರೆಮಾಚಲು ರವಿಕುಮಾರ್ ಹೇಳಿಕೆಯನ್ನು ವಿವಾದ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.