ADVERTISEMENT

'ರಾಜ್ಯದ ಶೈಕ್ಷಣಿಕ ಕ್ಷೇತ್ರದ ಬಿಕ್ಕಟ್ಟಿಗೆ ಸಿಎಂ, ಶಿಕ್ಷಣ ಸಚಿವರೇ ಹೊಣೆಗಾರರು'

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2020, 8:33 IST
Last Updated 20 ಡಿಸೆಂಬರ್ 2020, 8:33 IST
ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ
ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ   

ಬೆಂಗಳೂರು: ರಾಜ್ಯ ಸರ್ಕಾರದ ಎಡಬಿಡಂಗಿ ನಿಲುವುಗಳಿಂದಾಗಿ ವಿದ್ಯಾರ್ಥಿಗಳು,ಪೋಷಕರು ಮತ್ತು ಖಾಸಗಿ ಶಾಲೆಗಳ ಮಾಲೀಕರು ಎಲ್ಲರೂ ಬೀದಿಗಿಳಿದಿದ್ದಾರೆ. ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರು ತಕ್ಷಣ ಸ್ಪಷ್ಟನಿರ್ಧಾರ ಕೈಗೊಂಡು ಈ ಬಿಕ್ಕಟ್ಟನ್ನು ಬಗೆಹರಿಸಿ ವಿದ್ಯಾರ್ಥಿಗಳನ್ನು ರಕ್ಷಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿನ ಈಗಿನ ಬಿಕ್ಕಟ್ಟಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ನೇರ ಹೊಣೆಗಾರರು. ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ಜಗಳ ತಂದು ಹಾಕಿ ಇವರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲ. ತರಗತಿಗಳಿಲ್ಲದೆ ಇದ್ದರೂ ಪೋಷಕರಿಂದ ಪೂರ್ಣಶುಲ್ಕ ವಸೂಲಿ‌ ಮಾಡಲಾಗುತ್ತಿದೆ. ಇದಕ್ಕಾಗಿ ಆನ್‌ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿ ಪೋಷಕರನ್ನು ಬ್ಲಾಕ್‌ಮೇಲ್ ಮಾಡಲಾಗುತ್ತಿದೆ. ಸರ್ಕಾರ ಕಣ್ಣುಮುಚ್ಚಿಕೊಂಡು ಕೂತಿದೆ. ತರಗತಿಗಳು ನಡೆಯದಿದ್ದರೂ ಬೋಧನಾ ಶುಲ್ಕದ ಜೊತೆಯಲ್ಲಿ ಪ್ರಯೋಗಶಾಲೆ, ಲೈಬ್ರೆರಿ ಮತ್ತಿತರ ಪಠ್ಯೇತರ ಶುಲ್ಕ ವಸೂಲಿಗೆ ಹೊರಟಿರುವ ಖಾಸಗಿ ಶಾಲೆಗಳು ಸರ್ಕಾರದ ಪೊಳ್ಳು ಬೆದರಿಕೆಗೆ ಜಗ್ಗುತ್ತಿಲ್ಲ. ಯಡಿಯೂರಪ್ಪ ಅವರ ಸರ್ಕಾರ ಖಾಸಗಿ ಶಾಲೆಗಳ ಜೊತೆ ಷಾಮೀಲಾಗಿದೆ ಎಂದು ಆರೋಪಿಸಿದ್ದಾರೆ.

ADVERTISEMENT

ಶಾಲೆ ಪುನರಾರಂಭದ ಬಗ್ಗೆ ಸರಣಿ ಸಭೆಗಳು, ಶಿಕ್ಷಣ ಸಚಿವರು ಮತ್ತು ಅಧಿಕಾರಿಗಳ ತರಹೇವಾರಿ ಹೇಳಿಕೆಗಳು ಪೋಷಕರನ್ನು ಗೊಂದಲಕ್ಕೆ ನೂಕಿವೆ. ತಕ್ಷಣ ಸಚಿವ ಸುರೇಶ್ ಕುಮಾರ್ ಅವರು ಖಾಸಗಿ ಶಾಲೆಗಳು ಮತ್ತು ಪೋಷಕರ ಸಭೆ ಕರೆದು ಪಾರದರ್ಶಕವಾಗಿ ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.