ADVERTISEMENT

ಕೊರೊನಾ ನಿಯಂತ್ರಣದ ಬಗ್ಗೆ ತಕ್ಷಣ ಶ್ವೇತಪತ್ರ ಹೊರಡಿಸಿ: ಸಿದ್ದರಾಮಯ್ಯ ಆಗ್ರಹ

ಉದಾಸೀನ- ಉಡಾಫೆ ಮುಂದುವರಿಸಿದರೆ ಬೀದಿಗಿಳಿದು ಹೋರಾಟ– ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2020, 19:53 IST
Last Updated 28 ಜೂನ್ 2020, 19:53 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ‘ಕೊರೊನಾ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಈವರೆಗೆ ತೆಗೆದುಕೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು- ವೆಚ್ಚಗಳ ಬಗ್ಗೆ ತಕ್ಷಣವೇ ಶ್ವೇತಪತ್ರ ಹೊರಡಿಸಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ರಾಜ್ಯ ಸರ್ಕಾರ ಪಾರದರ್ಶಕವಾಗಿ ಕ್ರಮಕೈಗೊಳ್ಳದ ಕಾರಣ ಜನರಲ್ಲಿ ಅನುಮಾನ, ಅಸುರಕ್ಷತೆ, ಅಭದ್ರತೆ ಹುಟ್ಟಿಕೊಂಡಿದೆ. ಈ ರೀತಿಯ ಉದಾಸೀನ- ಉಡಾಫೆ ಮುಂದುವರಿಸಿದರೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ’ ಎಂದು ಅವರು ಎಚ್ಚರಿಕೆ‌ ನೀಡಿದ್ದಾರೆ.

‘ಕೊರೊನಾ ನಿಯಂತ್ರಣಕ್ಕೆ ಖಜಾನೆಯಿಂದ ಯಾವ ಉದ್ದೇಶಗಳಿಗೆ ಎಷ್ಟು ಖರ್ಚಾಗಿದೆ, ಕ್ವಾರಂಟೈನ್, ಚಿಕಿತ್ಸೆ, ಪಿಪಿಇ, ವೆಂಟಿಲೇಟರ್ ಆಮ್ಲಜನಕ ಸಿಲಿಂಡರ್, ಮಾಸ್ಕ್, ಸ್ಯಾನಿಟೈಸರ್ ಮತ್ತಿತರ ವೈದ್ಯಕೀಯ ಸಲಕರಣೆ ಖರೀದಿಗೆ ವೆಚ್ಚವಾದ ಹಣವೆಷ್ಟು, ಕೇಂದ್ರ ಸರ್ಕಾರದಿಂದ ಬಂದಿರುವ ದುಡ್ಡು ಮತ್ತು ವೈದ್ಯಕೀಯ ಸಲಕರಣೆಗಳೆಷ್ಟು, ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಹಾಸಿಗೆಗಳೆಷ್ಟು, ಯಾವ ಮಾನದಂಡದ ಆಧಾರದಲ್ಲಿ ಖಾಸಗಿ ಆಸ್ಪತ್ರೆಗಳ ಶುಲ್ಕ ನಿಗದಿಪಡಿಸಲಾಗಿದೆ ಮುಂತಾದ ವಿವರಗಳನ್ನು ರಾಜ್ಯ ಸರ್ಕಾರ ಜನರ ಮುಂದಿಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ADVERTISEMENT

‘ನಾನು ಹಲವು ಪತ್ರಗಳನ್ನು ಬರೆದು ವಿವರಗಳನ್ನು ಕೇಳಿದರೂ ಇಲಾಖೆಗಳು ಸರಿಯಾದ ಮಾಹಿತಿ ಕೊಡುತ್ತಿಲ್ಲ. ಮಾಹಿತಿ ನೀಡಲು ನಿರಾಕರಿಸುವುದು ನನ್ನ ಹಕ್ಕುಚ್ಯುತಿ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.