ADVERTISEMENT

ಪ್ರವಾಹ ಚರ್ಚೆಗೆ ವಿಶೇಷ ಅಧಿವೇಶನ ಕರೆಯಲು ಸಿದ್ದರಾಮಯ್ಯ ಒತ್ತಾಯ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2020, 6:22 IST
Last Updated 26 ಅಕ್ಟೋಬರ್ 2020, 6:22 IST
ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು
ಕಲಬುರಗಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು   

ಕಲಬುರ್ಗಿ: ರಾಜ್ಯದ ಇಪ್ಪತ್ತು ಜಿಲ್ಲೆಗಳಲ್ಲಿ ಸಂಭವಿಸಿರುವ ಪ್ರವಾಹದ ನಷ್ಟ ಕುರಿತು ಚರ್ಚಿಸಲು ಶೀಘ್ರ ವಿಶೇಷ ಅಧಿವೇಶನ ‌ಕರೆಯಬೇಕು‌ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.

ನಗರದ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ನಿರ್ವಹಣೆಯಲ್ಲಿ ‌ರಾಜ್ಯ ಸರ್ಕಾರ ‌ಸಂಪೂರ್ಣ ಎಡವಿದೆ. ಇದುವರೆಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರವಾಹ ಸಂತ್ರಸ್ತರಿಗಾಗಿ ನಯಾಪೈಸೆಯನ್ನೂ ಬಿಡುಗಡೆ ‌ಮಾಡಿಲ್ಲ. ಬೆಳೆ ನಷ್ಟದಿಂದಾಗಿ ರೈತರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ ಎಂದರು.

ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ಮೂರು ಸಣ್ಣ ನೀರಾವರಿ ‌ಕೆರೆಗಳು ಒಡೆದಿವೆ. ಇದರಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಕೂಡಲೇ ಇಂತಹ ಒಡೆದ ಕೆರೆಗಳನ್ನು ದುರಸ್ತಿ ಮಾಡಬೇಕು ಎಂದರು.

ADVERTISEMENT

ರಾಜ್ಯಕ್ಕೆ ಕೇಂದ್ರ ಸರ್ಕಾರ ನಿರಂತರವಾಗಿ ಅನ್ಯಾಯ ಮಾಡುತ್ತಿದ್ದು, 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ₹ 5495 ಕೋಟಿ ವಿಶೇಷ ಅನುದಾನಕ್ಕೆ ಶಿಫಾರಸು ಮಾಡಿತ್ತು. ಆದರೆ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಶಿಫಾರಸು ವಾಪಸ್ ಪಡೆಯುವಂತೆ ಪತ್ರ ಬರೆದಿದ್ದಾರೆ ಎಂದು ‌ಟೀಕಿಸಿದರು.

ರಾಜ್ಯದಿಂದ 25 ಜನ ಬಿಜೆಪಿ ‌ಸಂಸದರು ಆಯ್ಕೆಯಾಗಿದ್ದಾರೆ. ಆದರೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಎದುರು ನಿಂತು ಹಣ ತರುವ ಧಮ್ ಇಲ್ಲ ಎಂದರು.

ಕುಣಿಯಲು ಬಾರದವರು ನೆಲ ಡೊಂಕು ಅಂದರಂತೆ!

ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಶಾಸಕರನ್ನು ಕರೆದು ಮಾತಾಡಿಸಲಿಲ್ಲ. ಅವರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ‌ಮಾಡಲಿಲ್ಲ. ಐಷಾರಾಮಿ ಹೋಟೆಲ್ ನಲ್ಲಿ ಕುಳಿತು ಅಧಿಕಾರ ನಡೆಸಿದರು. ಹೀಗೆ ಮಾಡಿದ್ದರಿಂದ ಶಾಸಕರು ಸರ್ಕಾರ ಕೆಡವಿದರು. ಆದರೆ, ನಾನೇ ಸರ್ಕಾರ ‌ಕೆಡವಿದೆ ಎನ್ನುತ್ತಿದ್ದಾರೆ. ಕುಮಾರಸ್ವಾಮಿ ಅವರದು ಕುಣಿಯಲು ಬಾರದವರು ನೆಲ ಡೊಂಕು ಅಂದರಂತೆ ಎನ್ನುವ ಸ್ಥಿತಿಯಾಗಿದೆ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.