ADVERTISEMENT

ಮಳೆ ಹಾನಿ: ಬೆಳೆ ಸಮೀಕ್ಷೆ ಮಾಡಿಸಿ, ಸಿಎಂಗೆ ಪತ್ರ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2021, 20:12 IST
Last Updated 11 ನವೆಂಬರ್ 2021, 20:12 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಮಳೆಯಿಂದ ಹಾನಿಯಾಗಿರುವ ಬೆಳೆಗಳ ಬಗ್ಗೆ ತಕ್ಷಣ ಸಮೀಕ್ಷೆ ಮಾಡಿಸಿ, ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

‘ಕೃಷಿ ಇಲಾಖೆಯ ಮಾಹಿತಿಯ ಪ್ರಕಾರ ಅಕ್ಟೋಬರ್ ಅಂತ್ಯದ ವೇಳೆಗೆ 11.22 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಆದರೆ, ಸರ್ಕಾರ ಕೈ ಕಟ್ಟಿ ಕುಳಿತಿದೆ. ಹಾನಿಯಾದ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡುವುದಾಗಲಿ, ಪರಿಹಾರ ನೀಡುವುದನ್ನಾಗಲಿ ಮಾಡಿಲ್ಲ’ ಎಂದು ಅವರು ದೂರಿದ್ದಾರೆ.

‘ಕೊಯಿಲಿಗೆ ಬಂದ ಬೆಳೆಗಳು ಮಳೆಯಿಂದಾಗಿ ಹೊಲ ಗದ್ದೆಗಳಲ್ಲೆ ಕೊಳೆತು ಹೋಗುವಂತಾಗಿದೆ. ಕಳೆದ ವರ್ಷ 77.65 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಈ ಬಾರಿ 1.07 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹೆಚ್ಚಾಗಿ ಬಿತ್ತನೆಯಾಗಿದೆ. ಆದರೆ, ಆರಂಭದಲ್ಲಿ ಬಿತ್ತನೆ ಮಾಡುವಾಗ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಳೆ ಕೈಕೊಟ್ಟ ಕಾರಣ ಅನೇಕ ಜಿಲ್ಲೆಗಳಲ್ಲಿ ಬಿತ್ತನೆ ಬೀಜಗಳು ಸರಿಯಾಗಿ ಹುಟ್ಟಲಿಲ್ಲ. ಆನಂತರ ಸರಿಯಾದ ಸಮಯಕ್ಕೆ ರಸಗೊಬ್ಬರ ಸಿಗಲಿಲ್ಲ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

‘ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಅಡಿಕೆ, ಕಾಫಿ, ಮೆಣಸು ಮುಂತಾದ ವಾಣಿಜ್ಯ ಬೆಳೆಗಳು ಸಮಸ್ಯೆಗಳನ್ನು ಎದುರಿಸುತ್ತಿವೆ. ಕೊಳೆ ರೋಗದ ಜೊತೆಗೆ ಅಡಿಕೆಗೆ ಹಳದಿ ಎಲೆ ರೋಗ ಬಂದಿದೆ. ಮೆಣಸಿನ ಬಳ್ಳಿಗಳು ಕೊಳೆತು ಹೋಗುತ್ತಿವೆ. ಕಾಫಿಯೂ ಕೊಳೆ ರೋಗದ ಸಮಸ್ಯೆ ಎದುರಿಸುತ್ತಿದೆ. ಆದರೆ, ಕೃಷಿ ಇಲಾಖೆಯ ಮಾಹಿತಿಗಳಲ್ಲಿ ಕಳೆದ ಒಂದೂವರೆ ತಿಂಗಳಿಂದ ಅತಿ ಹೆಚ್ಚು ಮಳೆ ಬಿದ್ದು ಹಾನಿಯಾಗಿರುವ ಜಿಲ್ಲೆಗಳ ಮಾಹಿತಿ ಇಲ್ಲ. ಮಲೆನಾಡು, ಕರಾವಳಿ ಜಿಲ್ಲೆಗಳ ಅಡಿಕೆ, ಮೆಣಸು, ಕಾಫಿಗೆ ಆಗಿರುವ ನಷ್ಟದ ಮಾಹಿತಿಯೂ ಇಲ್ಲ’.

‘ಕೇಂದ್ರ ಸರ್ಕಾರವೂ ಕೂಡ ಸಮರ್ಪಕ ಪರಿಹಾರ ನೀಡುತ್ತಿಲ್ಲ. 2019–20, 2020–21ರ ವರ್ಷಗಳಲ್ಲಿ ಸುಮಾರು ₹ 1.5 ಲಕ್ಷದಿಂದ ₹ 2 ಲಕ್ಷ ಕೋಟಿ ನಷ್ಟವಾಗಿತ್ತು. ಕೇಂದ್ರ 2019–20ರಲ್ಲಿ ₹ 1,652.85, 2020–21ರಲ್ಲಿ ₹ 1,328.30 ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಅಂದರೆ, ಕೇವಲ ₹ 2981.15 ಕೋಟಿ ಬಿಡುಗಡೆ ಮಾಡಿದೆ. 2021–22ರ ನಷ್ಟಕ್ಕೆ ನಯಾ ಪೈಸೆ ನೀಡಿಲ್ಲ. ಕೇಂದ್ರ ಮತ್ತು ರಾಜ್ಯಗಳೆರಡೂ ಈ ರೀತಿ ನಿರ್ಲಕ್ಷ್ಯ ತೋರಿಸುವುದು ಅಮಾನವೀಯ ನಡವಳಿಕೆ’ ಎಂದೂ ಆಕ್ರೋಶ
ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.