ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಈ ಬಾರಿ ಏಕಕಾಲಕ್ಕೆ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.
ಎಂಜಿನಿಯರಿಂಗ್, ಪಶುವೈದ್ಯಕೀಯ ಮತ್ತಿತರ ಕೋರ್ಸ್‌ಗಳಿಗೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆದ್ಯತೆಗಳನ್ನು ದಾಖಲಿಸಲು ಜುಲೈ 23ರಿಂದ ಏಳು ದಿನಗಳವರೆಗೆ ಅವಕಾಶ ನೀಡಲಾಗಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗ ನೀಟ್ ಪರೀಕ್ಷೆಯ ಫಲಿತಾಂಶದ ಪಟ್ಟಿಯನ್ನು ಕೆಇಎಗೆ ಹಸ್ತಾಂತರಿಸಿದ ನಂತರ ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ ಇತರ ವೈದ್ಯಕೀಯ ಕೋರ್ಸುಗಳ ಆದ್ಯತೆಗಳನ್ನು ದಾಖಲಿಸಲು ಅವಕಾಶ ನೀಡಲಾಗುವುದು. ನಂತರ ನೀಟ್–ಸಿಇಟಿ ಆಧಾರದಲ್ಲಿ ಸಮನಾಂತರವಾಗಿ ಅಣಕು ಸೀಟು ಹಂಚಿಕೆ, ನೈಜ ಸೀಟು ಹಂಚಿಕೆ ಪ್ರಕ್ರಿಯೆಗಳು ಆರಂಭವಾಗಲಿವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.
‘ರಾಷ್ಟ್ರೀಯ ವೈದ್ಯಕೀಯ ಆಯೋಗದ ಜತೆಗೂ ಸಂಪರ್ಕದಲ್ಲಿದ್ದೇವೆ. ಈ ವಾರದಲ್ಲಿ ರಾಷ್ಟ್ರ ಮಟ್ಟದ ವೈದ್ಯಕೀಯ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ನಂತರ ರಾಜ್ಯದ ಸೀಟು ಹಂಚಿಕೆಯ ವೇಳಾಪಟ್ಟಿ ಪ್ರಕಟಿಸಲಾಗುವುದು’ ಎಂದು ಸ್ಪಷ್ಟಪಡಿಸಿದ್ದಾರೆ.
ಡಿಸಿಇಟಿ: ಎರಡನೇ ವರ್ಷದ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಮೊದಲ ಸುತ್ತಿನ ವಿದ್ಯಾರ್ಥಿಗಳಿಗೆ ತಾವು ಆಯ್ಕೆ ಮಾಡಿಕೊಂಡ ಕಾಲೇಜಿಗೆ ಪ್ರವೇಶ ಪಡೆಯಲು ಜುಲೈ 27 ಕೊನೆಯ ದಿನ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.