ADVERTISEMENT

ಎಚ್‌ಡಿಕೆಯಿಂದ ‍‘ಭೂಕಬಳಿಕೆ’: ಅಮ್ಲಾನ್‌ ನೇತೃತ್ವದಲ್ಲಿ ತನಿಖೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2025, 23:30 IST
Last Updated 31 ಜನವರಿ 2025, 23:30 IST
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ   

ಬೆಂಗಳೂರು: ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ, ಅವರ ಕುಟುಂಬದ ಸದಸ್ಯರು ಮತ್ತು ಸಂಬಂಧಿಗಳು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನುಗಳನ್ನು ಕಬಳಿಸಿದ್ದಾರೆ ಎಂಬ ಆರೋಪದ ಕುರಿತು ತನಿಖೆಗೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ಅಧ್ಯಕ್ಷತೆಯಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ–1964 ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ–2011ರ ಅಡಿಯಲ್ಲಿ ಈ ವಿಶೇಷ ತನಿಖಾ ತಂಡ ರಚಿಸಿ ಕಂದಾಯ ಇಲಾಖೆಯು ಜನವರಿ 28ರಂದು ಆದೇಶ ಹೊರಡಿಸಿದೆ. ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ನಿಸಾರ್ ಅಹಮ್ಮದ್, ಬೆಂಗಳೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಇಸ್ಲಾವುದ್ದೀನ್‌ ಗದ್ಯಾಳ, ಕಂದಾಯ ಆಯುಕ್ತಾಲಯದ ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ಅವರನ್ನು ಎಸ್‌ಐಟಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಗ್ರೇಡ್‌–2 ತಹಶೀಲ್ದಾರ್‌ ಶೀತಲ್‌ ಅವರನ್ನು ಎಸ್‌ಐಟಿಯ ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಕುಮಾರಸ್ವಾಮಿ ಮತ್ತು ಅವರ ಕುಟುಂಬದವರು ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನುಗಳನ್ನು ಕಬಳಿಸಿದ್ದಾರೆ ಎಂದು ಆರೋಪಿಸಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್‌.ಆರ್‌. ಹಿರೇಮಠ ಅವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಾಲಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯನ್ನೂ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್‌, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಆ ಬೆನ್ನಲ್ಲೇ ಎಸ್‌ಐಟಿ ರಚಿಸಲಾಗಿದೆ.

ADVERTISEMENT

ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ನಿಸಾರ್ ಅಹಮ್ಮದ್, ಬೆಂಗಳೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಇಸ್ಲಾವುದ್ದೀನ್‌ ಗದ್ಯಾಳ, ಕಂದಾಯ ಆಯುಕ್ತಾಲಯದ ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ಅವರನ್ನು ಎಸ್‌ಐಟಿಯ
ಸದಸ್ಯರನ್ನಾಗಿ ನೇಮಿಸಲಾಗಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಗ್ರೇಡ್‌–2 ತಹಶೀಲ್ದಾರ್‌ ಶೀತಲ್‌ ಅವರನ್ನು ಎಸ್‌ಐಟಿಯ ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಕುಮಾರಸ್ವಾಮಿ ಮತ್ತು ಅವರ ಕುಟುಂಬದವರು ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನುಗಳನ್ನು ಕಬಳಿಸಿದ್ದಾರೆ ಎಂದು ಆರೋಪಿಸಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್‌.ಆರ್‌. ಹಿರೇಮಠ ಅವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಾಲಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯನ್ನೂ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್‌, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಆ ಬೆನ್ನಲ್ಲೇ ಎಸ್‌ಐಟಿ ರಚಿಸಲಾಗಿದೆ.

ಒತ್ತುವರಿ ತೆರವಿನ ಹೊಣೆ:

ಕೇತಗಾನಹಳ್ಳಿ ಗ್ರಾಮದ ಸರ್ವೆ ನಂಬರ್‌ 8, 9, 10, 16, 17 ಮತ್ತ 79ರಲ್ಲಿ ಮಂಜೂರಾತಿಯಾಗಿರುವ ಜಮೀನುಗಳ ಸಂಪೂರ್ಣ ದಾಖಲೆಗಳ ನೈಜತೆಯನ್ನು ಪರಿಶೀಲಿಸಬೇಕು. ದಾಖಲೆಗಳ ನೈಜತೆಯನ್ನು ಪರಿಶೀಲಿಸಲು ಅಗತ್ಯವಿದ್ದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೂ ಕಳಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಸರ್ವೆ ನಂಬರ್‌ಗಳಲ್ಲಿ ಭೂ ಮಂಜೂರಾತಿಯಾಗಿರುವ ಜಮೀನುಗಳಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ– 1964, ಕರ್ನಾಟಕ ಭೂ ಕಂದಾಯ ನಿಯಮಗಳು– 1966, ಕರ್ನಾಟಕ ಭೂ ಮಂಜೂರಾತಿ ನಿಯಮಗಳು–1969 ಹಾಗೂ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಕೆಲವೊಂದು ಜಮೀನುಗಳ ಪರಭಾರೆ ನಿಷೇಧ)– ಕಾಯ್ದೆ–1978ರ ಉಲ್ಲಂಘನೆ ಆಗಿದೆಯೆ ಎಂಬುದನ್ನೂ ಪರಿಶೀಲಿಸಿ ವರದಿ ನೀಡುವಂತೆ ಎಸ್‌ಐಟಿಗೆ ಸೂಚಿಸಲಾಗಿದೆ.

ಮಂಜೂರಾತಿಯಾಗಿರುವ ಜಮೀನುಗಳಲ್ಲಿ ಸರ್ಕಾರಿ ಜಮೀನಿನ ಒತ್ತುವರಿ ಆಗಿದ್ದಲ್ಲಿ ಅದನ್ನು ತೆರವುಗೊಳಿಸಲು ಕ್ರಮವಹಿಸಬೇಕು. ಮೂಲ ಸರ್ವೆ ದಾಖಲೆಗಳಲ್ಲಿ ಉಲ್ಲೇಖವಾಗಿರುವ ಸಾರ್ವಜನಿಕ ರಸ್ತೆ, ಜಲಕಾಯ ಮತ್ತು ಜಲಮೂಲಗಳ ಯಥಾಸ್ಥಿತಿಯನ್ನು ಕಾಪಾಡಿಕೊಂಡಿರುವ ಬಗ್ಗೆಯೂ ಪರಿಶೀಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಮ್ಲಾನ್ ಆದಿತ್ಯ ಬಿಸ್ವಾಸ್

ಮೂರು ತಿಂಗಳ ಗಡುವು

ಈ ಪ್ರಕರಣದಲ್ಲಿ 2024ರ ನವೆಂಬರ್‌ 20ರಂದು ಕಂದಾಯ ಇಲಾಖೆಯು ಹೈಕೋರ್ಟ್‌ಗೆ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ಕೇತಗಾನಹಳ್ಳಿ ಗ್ರಾಮದ ಸರ್ವೆ ನಂಬರ್‌ 8 9 10 16 17 ಮತ್ತ 79ರಲ್ಲಿ ಜಲಕಾಯ ಜಲಮೂಲ ಪ್ರದೇಶ ಸರ್ಕಾರಿ ಖರಾಬು ಜಮೀನು ಮತ್ತು ಗೋಮಾಳಗಳ ಜಮೀನುಗಳ ಒತ್ತುವರಿ ನಡೆದಿದೆ ಎಂದು ತಿಳಿಸಲಾಗಿತ್ತು. ಭೂ ಮಂಜೂರಾತಿ ಭೂಕಂದಾಯ ಕಾಯ್ದೆ ನಿಯಮಗಳು ಹಾಗೂ ಪಿಟಿಸಿಎಲ್‌ ಕಾಯ್ದೆಯ ಉಲ್ಲಂಘನೆಯೂ ನಡೆದಿದೆ ಎಂದು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಲಾಗಿತ್ತು. ಈ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸಲು ವಿಶೇಷ ತನಿಖಾ ತಂಡಕ್ಕೆ ಮೂರು ತಿಂಗಳ ಗಡುವು ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.