ADVERTISEMENT

ಎಸ್.ಕೆ. ಕಾಂತಾಗೆ ‘ದೇವರಾಜ ಅರಸು’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2024, 15:14 IST
Last Updated 14 ಆಗಸ್ಟ್ 2024, 15:14 IST
ಎಸ್.ಕೆ. ಕಾಂತ
ಎಸ್.ಕೆ. ಕಾಂತ   

ಬೆಂಗಳೂರು: ಪ್ರಸಕ್ತ ಸಾಲಿನ ಡಿ.ದೇವರಾಜ ಅರಸು ರಾಜ್ಯಮಟ್ಟದ ಪ್ರಶಸ್ತಿಗೆ ಮಾಜಿ ಸಚಿವ, ಕಾರ್ಮಿಕ ಹೋರಾಟಗಾರ ಎಸ್.ಕೆ. ಕಾಂತಾ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್‌ ತಂಗಡಗಿ, ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಅವರ ನೇತೃತ್ವದ ಆಯ್ಕೆ ಸಮಿತಿಯು ಕಾಂತಾ ಅವರನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು ₹5 ಲಕ್ಷ ನಗದು ಒಳಗೊಂಡಿದೆ ಎಂದರು.

ಕಲಬುರಗಿ ಜಿಲ್ಲೆಯ ಹಾಗರಗುಂಡಗಿಯಲ್ಲಿ 1938ರಲ್ಲಿ ಜನಿಸಿದ್ದ ಕಾಂತಾ ಅವರು ಬಡತನದ ಕಾರಣಕ್ಕೆ ಶಾಲೆ ತೊರೆದು ಜವಳಿ ಕಾರ್ಖಾನೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡಿದ್ದರು. ಶೋಷಿತರು, ಕೂಲಿ ಕಾರ್ಮಿಕರ ಪರವಾಗಿ ಹಲವು ಹೋರಾಟ ನಡೆಸಿದ್ದಾರೆ. 1967ರಲ್ಲಿ ಪ್ರಜಾ ಸೋಷಲಿಸ್ಟ್‌ ಪಕ್ಷ ಸೇರಿ ರಾಜಕೀಯ ಕ್ಷೇತ್ರಕ್ಕೆ ಬಂದರು. 1986ರಲ್ಲಿ ಕಾರ್ಮಿಕ ಸಚಿವರಾದರು. ಶಾಸಕ, ಸಚಿವರಾಗಿದ್ದ ಅವರು ಇಂದಿಗೂ ಬಾಡಿಗೆ ಮನೆಯಲ್ಲೇ ವಾಸಿಸುತ್ತಿದ್ದಾರೆ. ಅವರನ್ನು ಆಯ್ಕೆ ಮಾಡಿರುವುದು ಪ್ರಶಸ್ತಿಯ ಮೌಲ್ಯ ಹೆಚ್ಚಿಸಿದೆ ಎಂದು ಹೇಳಿದರು.

ADVERTISEMENT

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆ.20ರಂದು ಬೆಳಗ್ಗೆ 11ಕ್ಕೆ ಹಮ್ಮಿಕೊಂಡಿರುವ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡುವರು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.