
ಬೆಂಗಳೂರು: ‘ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ’ ಎಂದು ಆರೋಪಿಸಿ ಇಂಧನ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಅಧಿಕಾರಿಗಳ ವಿರುದ್ಧ ಬಿಜೆಪಿ ನಾಯಕರು ದಾಖಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಆದೇಶ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮಂಗಳವಾರ ಈ ಕುರಿತಂತೆ ಆದೇಶಿಸಿತು.
‘ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿ ದಾಖಲಿಸಿರುವ ಖಾಸಗಿ ದೂರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ಪ್ರಾಥಮಿಕ ತನಿಖಾ ವರದಿ ತರಿಸಿಕೊಳ್ಳಬೇಕು’ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು.
ಈ ಆದೇಶ ಪ್ರಶ್ನಿಸಿ ಕೆ.ಜೆ.ಜಾರ್ಜ್, ತಾಂತ್ರಿಕ ವಿಭಾಗದ ಎಚ್.ಜೆ.ರಮೇಶ್ ಮತ್ತು ಇತ್ತೀಚೆಗೆ ಮರಣ ಹೊಂದಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ದಿವಂಗತ ಮಹಾಂತೇಶ ಬೀಳಗಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.