
ಬೆಂಗಳೂರು: ಕನಕಪುರ ರಸ್ತೆಯ ಸೋಮನಹಳ್ಳಿ ಟೋಲ್ ಪ್ಲಾಜಾದಲ್ಲಿ ಸ್ಥಳೀಯ ವಾಹನ ಸವಾರರಿಗೆ ಉಚಿತ ಪಾಸ್‌ಗಳನ್ನು ನೀಡುವಂತೆ ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ತಡೆ ನೀಡಿದೆ.
ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್ಎಐ) ಸಲ್ಲಿಸಿದ್ದ ರಿಟ್ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
ವಿಚಾರಣೆ ವೇಳೆ ಎನ್‌ಎಚ್ಎಐ ಪರ ವಕೀಲರು, ‘ಏಕಸದಸ್ಯ ನ್ಯಾಯಪೀಠದ ಆದೇಶ ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ. ಈಗಾಗಲೇ ಟೋಲ್ ಪ್ಲಾಜಾದಲ್ಲಿ ದ್ವಿಚಕ್ರ ವಾಹನಗಳು ಮತ್ತು ಟ್ರ್ಯಾಕ್ಟರ್‌ಗಳನ್ನು ಯಾವುದೇ ಶುಲ್ಕ ಪಡೆಯದೆ ಉಚಿತವಾಗಿ ಬಿಡಲಾಗುತ್ತಿದೆ. ಸ್ಥಳೀಯ ನಿವಾಸಿಗಳಿಗೆ ಪ್ರತಿ ತಿಂಗಳಿಗೆ ₹340 ಮೊತ್ತದ ಪಾಸ್‌ಗಳನ್ನು ವಿತರಣೆ ಮಾಡಲಾಗುತ್ತಿದೆ. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಬೇಕು’ ಎಂದು ಮನವಿ ಮಾಡಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಸೋಮನಹಳ್ಳಿ, ನೆಲಗುಲಿ ಮತ್ತು ಕಗ್ಗಲೀಪುರ ಗ್ರಾಮಸ್ಥರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಏಪ್ರಿಲ್ 23ಕ್ಕೆ ಮುಂದೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.