ADVERTISEMENT

‘ಗೃಹ ಲಕ್ಷ್ಮಿ’ ಯೋಜನೆ | ಗ್ರಾ.ಪಂ.ಗಳಲ್ಲಿ ವಿಶೇಷ ಶಿಬಿರ: ಸಚಿವ ಪ್ರಿಯಾಂಕ್ ಖರ್ಗೆ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2023, 16:17 IST
Last Updated 25 ಡಿಸೆಂಬರ್ 2023, 16:17 IST
ಪ್ರಿಯಾಂಕ್‌ ಖರ್ಗೆ
ಪ್ರಿಯಾಂಕ್‌ ಖರ್ಗೆ   

(ಸಂಗ್ರಹ ಚಿತ್ರ)

ಬೆಂಗಳೂರು: ‘ಗೃಹ ಲಕ್ಷ್ಮಿ’ ಯೋಜನೆ ಅರ್ಜಿದಾರರಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಬುಧವಾರದಿಂದ ಶುಕ್ರವಾರದವರೆಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಶಿಬಿರ ಆಯೋಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಆಧಾರ್ ಜೋಡಣೆ, ಬ್ಯಾಂಕ್‌ಗೆ ಸಂಬಂಧಿಸಿದ ತೊಂದರೆ, ಇ-ಕೆವೈಸಿ ಅಪ್ಡೇಟ್‌, ಹೊಸ ಬ್ಯಾಂಕ್ ಖಾತೆ ಆರಂಭ ಮತ್ತಿತರ ಸಮಸ್ಯೆಗಳಿಂದ ಹಲವು ಮಹಿಳೆಯರು ಗೃಹ ಲಕ್ಷ್ಮಿ ಯೋಜನೆ ಪ್ರಯೋಜನ ಪಡೆಯಲು ಸಾಧ್ಯವಾಗದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. ವಿಶೇಷ ಶಿಬಿರಗಳಲ್ಲಿ ಈ ಎಲ್ಲ ಸಮಸ್ಯೆಗಳನ್ನೂ ಪರಿಹರಿಸಿ, ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ADVERTISEMENT

ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಶಿಬಿರ ನಡೆಯಲಿದ್ದು, ಬಾಪೂಜಿ ಸೇವಾ ಕೇಂದ್ರದ ಕಂಪ್ಯೂಟರ್‌ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು, ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ (ಇ.ಡಿ.ಸಿ) ತಂಡಗಳ ಸಿಬ್ಬಂದಿ, ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹಾಗೂ ಇತರ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಶಿಬಿರದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದ್ದಾರೆ.

ಮೂರು ದಿನಗಳ ಕಾಲ ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ಶಿಬಿರ ನಡೆಯಲಿದೆ. ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ತೊಂದರೆ ಎದುರಿಸುತ್ತಿರುವ ಮಹಿಳೆಯರು ತಮ್ಮ ಹಾಗೂ ಪತಿಯ ಆಧಾರ್‌ ಕಾರ್ಡ್‌, ಪಡಿತರ ಚೀಟಿ, ಬ್ಯಾಂಕ್‌ ಪಾಸ್ ಪುಸ್ತಕಗಳೊಂದಿಗೆ ಶಿಬಿರಕ್ಕೆ ಬಂದು ಪರಿಹಾರ ಪಡೆಯಬಹುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.