
ಬೆಂಗಳೂರು: ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಅವರು ಮತ್ತು ಅವರ ಕುಟುಂಬದವರ ಪುನರ್ವಸತಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಸಂಜೆ ಅವರು ವರದಿ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ‘ಮಾಜಿ ದೇವದಾಸಿಯರ ಮೂಲ ಹಂತದ ಸಮೀಕ್ಷೆಯಲ್ಲಿ ಹಲವರು ಸಮೀಕ್ಷಾ ವ್ಯಾಪ್ತಿಯಿಂದ ಹೊರಗೆ ಉಳಿದಿದ್ದರು. ಹೀಗಾಗಿ ಮರುಸಮೀಕ್ಷೆ ನಡೆಸಲಾಗಿತ್ತು. ಸಮೀಕ್ಷೆಯಲ್ಲಿ ಯಾವುದೇ ಲೋಪ ಆಗದಂತೆ ಎಚ್ಚರಿಕೆ ವಹಿಸಲಾಗಿತ್ತು ಮತ್ತು ಸ್ವತಃ ನಾನೇ ಮೇಲ್ವಿಚಾರಣೆ ನಡೆಸಿದ್ದೆ’ ಎಂದು ತಿಳಿಸಿದರು.
‘ಮಾಜಿ ದೇವದಾಸಿ ಮಹಿಳೆಯರು, ಅವರ 1, 2 ಮತ್ತು 3ನೇ ತಲೆಮಾರಿನ ಮಕ್ಕಳ ಶಿಕ್ಷಣ, ವಿವಾಹ ಮತ್ತು ಅಂತರ್ಜಾತಿ ವಿವಾಹವನ್ನು ಪ್ರೋತ್ಸಾಹಿಸಬೇಕಿದೆ. ಈ ಮಕ್ಕಳು ಮತ್ತೆ ಈ ಅನಿಷ್ಟ ಪದ್ಧತಿಗೆ ಮರಳಬಾರದು. ಇದಕ್ಕಾಗಿ ಜಾಗೃತಿ ಮೂಡಿಸಬೇಕಿದೆ. ಈ ಎಲ್ಲ ಉದ್ದೇಶಗಳನ್ನು ಒಳಗೊಂಡು ಒಂದು ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.
ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮರುಸಮೀಕ್ಷೆ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.