ADVERTISEMENT

ವಿಚಾರಣೆ ವಿಳಂಬಕ್ಕೆ ಪ್ರಜ್ವಲ್‌ ಕಾರಣ: ಹೈಕೋರ್ಟ್‌ಗೆ ಪ್ರಾಸಿಕ್ಯೂಟರ್

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 15:31 IST
Last Updated 27 ಜೂನ್ 2025, 15:31 IST
ಪ್ರಜ್ವಲ್‌ ರೇವಣ್ಣ
ಪ್ರಜ್ವಲ್‌ ರೇವಣ್ಣ   

ಬೆಂಗಳೂರು: ‘ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ವಿಳಂಬವಾಗಲು ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ನೇರ ಕಾರಣರಾಗಿದ್ದಾರೆ’ ಎಂದು ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್‌ ಹೈಕೋರ್ಟ್‌ಗೆ ಅರುಹಿದರು.

ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರಜ್ವಲ್‌ ರೇವಣ್ಣ ಅವರು, ಎರಡನೇ ಬಾರಿಗೆ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ, ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್‌ ಆದ ಪದಾಂಕಿತ ಹಿರಿಯ ವಕೀಲ ಕೆ.ರವಿವರ್ಮ ಕುಮಾರ್, ‘ಪ್ರಕರಣವನ್ನು ವಿಚಾರಣೆಗೆ ಅಣಿಗೊಳಿಸಲು ಪ್ರಜ್ವಲ್‌ ನ್ಯಾಯಾಲಯಕ್ಕೆ ಅವಕಾಶವನ್ನೇ ನೀಡಿಲ್ಲ. ಅವರ ಈ ನಡತೆಯಿಂದಾಗಿ ವಿಚಾರಣೆ ಮಂದಗತಿಯಲ್ಲಿ ಸಾಗುತ್ತಿದೆ’ ಎಂದು ಆರೋಪಿಸಿದರು.

ADVERTISEMENT

‘ಅಷ್ಟಕ್ಕೂ, ವಿಚಾರಣಾ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿದ ಬಳಿಕವಷ್ಟೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕು. ಆದರೆ, ಪ್ರಜ್ವಲ್‌ ಈ ಪ್ರಕ್ರಿಯೆ ಅನುಸರಿಸದೇ ನೇರವಾಗಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಇದಕ್ಕೆ ಯಾವುದೇ ವಿಶೇಷ ಕಾರಣ ನೀಡಿಲ್ಲ. ಹೀಗಾಗಿ, ಈ ಹಂತದಲ್ಲಿ ಆರೋಪಿಗೆ ಜಾಮೀನು ನೀಡಬಾರದು’ ಎಂದು ಪ್ರತಿಪಾದಿಸಿದರು. ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.