ADVERTISEMENT

ಶೂಟೌಟ್‌ ಹೇಳಿಕೆಗೆ ಶ್ರೀರಾಮುಲು ಖಂಡನೆ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2018, 11:03 IST
Last Updated 25 ಡಿಸೆಂಬರ್ 2018, 11:03 IST
   

ಚಿತ್ರದುರ್ಗ: ಕೊಲೆ ಆರೋಪಿಗಳನ್ನು ಶೂಟೌಟ್‌ ಮಾಡುವಂತೆ ಪೊಲೀಸರಿಗೆ ತಾಕೀತು ಮಾಡಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಯನ್ನು ಶಾಸಕ ಶ್ರೀರಾಮುಲು ಖಂಡಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕುಮಾರಸ್ವಾಮಿ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದಾರೆ. ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹೊಣೆ ಹೊತ್ತಿದ್ದಾರೆ. ಅವರೇ ಇಂತಹ ಹೇಳಿಕೆ ನೀಡುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದ್ದಾರೆ.

‘ಮುಖ್ಯಮಂತ್ರಿ ಜವಾಬ್ದಾರಿಯುತವಾಗಿ ನಡೆದುಕೊಳ್ಳುವ ಅಗತ್ಯವಿದೆ. ಸಂಘಪರಿವಾರದ ಕಾರ್ಯಕರ್ತರನ್ನು ಕೊಲೆಗೈದ ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗದ ಕುಮಾರಸ್ವಾಮಿ, ತಮ್ಮ ಪಕ್ಷದ ಮುಖಂಡರ ಕೊಲೆಯಾದಾಗ ಉದ್ವೇಗದಿಂದ ಮಾತನಾಡುತ್ತಾರೆ’ ಎಂದು ಆರೋಪಿಸಿದ್ದಾರೆ.

ADVERTISEMENT

ಬಡ್ತಿ ಮೀಸಲು ನೀಡಿ:‘ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದ್ದು, ಹೊಣೆಗಾರಿಕೆಯಿಂದ ನುಣಿಚಿಕೊಳ್ಳಲು ಸರ್ಕಾರ ಪ್ರಯತ್ನಿಸಬಾರದು’ ಎಂದು ಶ್ರೀರಾಮುಲು ಎಚ್ಚರಿಕೆ ನೀಡಿದರು.

‘ಬಡ್ತಿ ಮೀಸಲಾತಿ ನೀಡದೇ ಇರುವುದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಸರ್ಕಾರಿ ನೌಕರರು ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ. ಕೆಲವರು ಆತ್ಮಹತ್ಯೆಗೂ ಯತ್ನಿಸಿದ್ದಾರೆ. ಮೊದಲು ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡಿ. ಬಳಿಕ ಹಿಂದುಳಿದ ವರ್ಗಗಳಿಗೆ ಒತ್ತು ನೀಡಿ’ ಎಂದು ಆಗ್ರಹಿಸಿದರು.

‘ಪರಿಶಿಷ್ಟ ಪಂಗಡದ ಮೀಸಲಾತಿಯ ಪ್ರಮಾಣವನ್ನು ಶೇ 3ರಿಂದ 7ಕ್ಕೆ ಏರಿಕೆ ಮಾಡುವ ಅಗತ್ಯವಿದೆ. ಪರಿಶಿಷ್ಟ ಪಂಗಡದ ಕುಟುಂಬಗಳ ಗಾತ್ರ ಹಿಗ್ಗುತ್ತಿದ್ದು, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಿ’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.