ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: ಶಿಕ್ಷಕರಿಗೆ ಲಸಿಕೆ ನೀಡಲು ಡಿಸಿಗಳಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2021, 11:15 IST
Last Updated 24 ಜೂನ್ 2021, 11:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಜುಲೈ ಮೂರನೇ ವಾರದಲ್ಲಿ ನಡೆಯಲಿರುವ 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಬೇಕು’ ಎಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ‘ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯ ಪಟ್ಟಿಯನ್ನು ಆಯಾ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ನೀಡಲಿದ್ದಾರೆ. ಅವರೆಲ್ಲರಿಗೂ ಪರೀಕ್ಷೆ ಆರಂಭಕ್ಕೂ ಮೊದಲೇ ಲಸಿಕೆ ದೊರೆಯುವಂತೆ ಮಾಡಬೇಕು’ ಎಂದಿದ್ದಾರೆ.

‘ಈ ಬಾರಿ ಅಂತರ ಕಾಪಾಡಿಕೊಳ್ಳುವ ಉದ್ದೇಶದಿಂದ ಆರು ಸಾವಿರಕ್ಕೂ ಹೆಚ್ಚಿನ ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ. ಹೀಗಾಗಿ, ಹೆಚ್ಚಿನ ಶಿಕ್ಷಕರು, ಸಿಬ್ಬಂದಿ ಮತ್ತು ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಅವರೆಲ್ಲರಿಗೂ ಆದ್ಯತೆಯಲ್ಲಿ ಲಸಿಕೆ ನೀಡಬೇಕಾಗಿದೆ’ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ADVERTISEMENT

ಶಿಕ್ಷಕರ ಬಿಡುಗಡೆಗೆ ಸೂಚನೆ: ‘ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರನ್ನು ಆ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು’ ಎಂದೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸುರೇಶ್ ಕುಮಾರ್ ನಿರ್ದೇಶನ ನೀಡಿದ್ದಾರೆ.

‘ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕಾದ ಶಿಕ್ಷಕರು ಕೋವಿಡ್ ಲಸಿಕೆ ಪಡೆಯಬೇಕಿದೆ. ಜೊತೆಗೆ, ಪರೀಕ್ಷಾ ಪೂರ್ವ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕಿದೆ. ಈಗಾಗಲೇ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿದ್ದು, ಶಾಲೆಗಳಲ್ಲಿ ಮಕ್ಕಳ ದಾಖಲಾತಿ ನಡೆಯುತ್ತಿದೆ. ಹೀಗಾಗಿ, ಶಿಕ್ಷಕರು ಶಾಲಾ ಕರ್ತವ್ಯದಲ್ಲಿ ಭಾಗಿಯಾಗಿರಬೇಕಿರುವುದರಿಂದ ತಕ್ಷಣವೇ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು’ ಎಂದು ಮುಖ್ಯ ಆಯುಕ್ತರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.