
ಸಾಂದರ್ಭಿಕ ಚಿತ್ರ
ಬೆಂಗಳೂರು: ಮಾನ್ಯತೆ ನವೀಕರಣಗೊಳ್ಳದ ಪ್ರೌಢಶಾಲೆಗಳ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವಂತೆ ಸೂಚಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆಗೆ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಆಕ್ಷೇಪ ವ್ಯಕ್ತಪಡಿಸಿವೆ.
‘2025-26ನೇ ಸಾಲಿಗೆ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲೆಗಳ ಮಾನ್ಯತೆ ನವೀಕರಣಕ್ಕಾಗಿ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಕೆಲ ಷರತ್ತುಗಳನ್ನು ಸಡಿಲಿಸುವಂತೆ ಶಿಕ್ಷಣ ಸಚಿವರ ಜತೆ ಚರ್ಚಿಸಿದ್ದು, ಕಠಿಣ ನಿಯಮಗಳನ್ನು ಸಡಿಲಿಸಲು ಉಪ ಸಮಿತಿ ರಚಿಸಲಾಗಿದೆ. ಸಮಿತಿಯು ವರದಿ ಸಲ್ಲಿಸುವ ಮೊದಲೇ ಮಂಡಳಿ ಸುತ್ತೋಲೆ ಹೊರಡಿಸಿರುವುದು ಸರಿಯಲ್ಲ’ ಎಂದು ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘ ಸಂಚಾಲಕ ಡಿ. ಶಶಿಕುಮಾರ್ ದೂರಿದ್ದಾರೆ.
‘ಮಾನ್ಯತೆ ನವೀಕರಣ ವಿಷಯ ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕ್ರಮ ಜರುಗಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದರೂ ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದೆ. ವಿದ್ಯಾರ್ಥಿಗಳನ್ನು ಪರೀಕ್ಷಾ ಸಮಯದಲ್ಲಿ ಅತಂತ್ರ ಮಾಡುವುದು ಸರಿಯಲ್ಲ. ಸುತ್ತೋಲೆ ವಾಪಸ್ ಪಡೆಯಬೇಕು’ ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಒತ್ತಾಯಿಸಿದ್ದಾರೆ.
ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಪುಟ್ಟಣ್ಣ ನೇತೃತ್ವದಲ್ಲಿ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸದಸ್ಯರು ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರನ್ನು ಬುಧವಾರ ಭೇಟಿ ಮಾಡಿ, ಸುತ್ತೋಲೆ ವಾಪಸ್ ಪಡೆಯಲು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.