ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ಪೂರ್ಣ: ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 14 ಜುಲೈ 2021, 18:42 IST
Last Updated 14 ಜುಲೈ 2021, 18:42 IST
ಎಸ್. ಸುರೇಶ್ ಕುಮಾರ್
ಎಸ್. ಸುರೇಶ್ ಕುಮಾರ್   

ಬೆಂಗಳೂರು: ‘ಇದೇ 19 ಮತ್ತು 22ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಿದ್ಧತೆಗಳ ಪರಿಶೀಲಿಸಿದ್ದಾರೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ಶಿಕ್ಷಣ ಇಲಾಖೆಯ ನಿರ್ದೇಶಕರ ಮಟ್ಟದ ಅಧಿಕಾರಿಗಳ ಸಭೆಯನ್ನು ಬುಧವಾರ ನಡೆಸಿದ ಅವರು, ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲು ಸೂಚಿಸಿದರು.

‘ಮಕ್ಕಳಿಗೆ ಪರೀಕ್ಷಾಂಗಣ ಸುರಕ್ಷತೆ ಮತ್ತು ಆತ್ಮವಿಶ್ವಾಸ ಮೂಡಿಸಲು ಕ್ರಮ ವಹಿಸಲಾಗಿದೆ. ಎಲ್ಲ ವಿದ್ಯಾರ್ಥಿಗಳಿಗೂ ಒಎಂಆರ್ ಶೀಟ್ ಕುರಿತು ತಿಳಿವಳಿಕೆ ಮೂಡಿಸಲಾಗಿದೆ. ಪರೀಕ್ಷಾ ಕೊಠಡಿಯಲ್ಲೂ ಮೇಲ್ವಿಚಾರಕರು ಮಾರ್ಗದರ್ಶನ ನೀಡಲಿದ್ದಾರೆ. ಪರೀಕ್ಷೆಗೆ ಮೊದಲು ಮತ್ತು ನಂತರ ಪರೀಕ್ಷಾ ಕೇಂದ್ರದ ಆವರಣ ಮತ್ತು ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಶೇ 100ರಷ್ಟು ಪರೀಕ್ಷಾ ಸಿಬ್ಬಂದಿ ಲಸಿಕೆ ಪಡೆದಿದ್ದಾರೆ’ ಎಂದರು.

ADVERTISEMENT

‘ಪರೀಕ್ಷೆಗೆ ಎರಡು ದಿನಗಳ ಮೊದಲು ಈ ಪ್ರಕ್ರಿಯೆಗೆ ನೇಮಕಗೊಂಡಿರುವ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು ಪರೀಕ್ಷಾ ಕೇಂದ್ರದಲ್ಲಿ ಅಣಕು ಪರೀಕ್ಷಾ ಪ್ರಕ್ರಿಯೆ ನಡೆಸಲಿದ್ದಾರೆ. ಸ್ಯಾನಿಟೈಸರ್, ಮಾಸ್ಕ್, ಥರ್ಮಲ್ ಸ್ಕ್ಯಾನರ್ ಪೂರೈಕೆ ಸೇರಿದಂತೆ ಎಲ್ಲ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ, ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು, ಕೊಠಡಿ ಮೇಲ್ವಿಚಾರಕರು, ಪರೀಕ್ಷಾ ಕೇಂದ್ರದ ಅಧೀಕ್ಷಕರು ಸೇರಿದಂತೆ ಎಲ್ಲ ಸಿಬ್ಬಂದಿಯನ್ನು ನಿಯುಕ್ತಿಗೊಳಿಸಲಾಗಿದೆ’ ಎಂದೂ ತಿಳಿಸಿದರು.

‘ಯಾವುದೇ ವಿದ್ಯಾರ್ಥಿ ವಾಹನ ಸೌಲಭ್ಯ ಇಲ್ಲದೆ ಪರೀಕ್ಷೆಗೆ ಗೈರು ಹಾಜರಾಗದಂತೆ ಗಮನಿಸಲು ಸೂಚಿಸಲಾಗಿದೆ. ಪ್ರವೇಶ ಪತ್ರ ತೋರಿಸಿ ಮಕ್ಕಳು ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಿ ಸಾರಿಗೆ ಇಲಾಖೆ ಈಗಾಗಲೇ ಸುತ್ತೋಲೆ ಹೊರಡಿಸಿದೆ’ ಎಂದೂ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.