
ಸಾಂಕೇತಿಕ ಚಿತ್ರ
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಅನುತ್ತೀರ್ಣರಾದ ಹಾಗೂ ಕಡಿಮೆ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಆಯಾ ಶಾಲೆಗಳಲ್ಲೇ ಪರಿಹಾರ ಬೋಧನೆ ಆರಂಭಿಸಲಾಗಿದೆ. ರಜೆ ಅವಧಿ ಕಡಿತಗೊಳಿಸಿದ್ದಕ್ಕೆ ಶಿಕ್ಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಗಣಿತ, ವಿಜ್ಞಾನ, ಇಂಗ್ಲಿಷ್ ವಿಷಯಗಳಲ್ಲಿ ಪರಿಹಾರ ಬೋಧನೆಗೆ ಹೆಚ್ಚಿನ ವಿದ್ಯಾರ್ಥಿಗಳು ಒಲವು ತೋರಿದ್ದಾರೆ. ರಜೆಯಲ್ಲಿದ್ದ ಶಿಕ್ಷಕರಿಗೆ ಶಾಲೆಗೆ ಮರಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚನೆ ನೀಡಿದೆ. 15 ದಿನಗಳ ರಜೆ ಕಡಿತದ ಅವಧಿಯನ್ನು ಪರಿವರ್ತಿತ ರಜೆಯಾಗಿ ಬಳಸಿಕೊಳ್ಳಲು ಅವಕಾಶ ಕಲ್ಪಿಸಿದೆ.
2023–24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಕ್ರಮಗಳನ್ನು ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್‌ಕಾಸ್ಟಿಂಗ್ ಸೇರಿದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡ ಪರಿಣಾಮ ಫಲಿತಾಂಶ ಕಳೆದ ಬಾರಿಗಿಂತ ಶೇಕಡ 30ರಷ್ಟು ಕುಸಿತವಾಗಿತ್ತು. ಪರೀಕ್ಷೆ ಬರೆದಿದ್ದ 8.59 ಲಕ್ಷ ವಿದ್ಯಾರ್ಥಿಗಳಲ್ಲಿ 3.97 ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು. ಇದರಿಂದ ವಿದ್ಯಾರ್ಥಿಗಳ ಮನೋಬಲ ಕುಗ್ಗುವ ಸಾಧ್ಯತೆ ಇದೆ ಎಂದು ಮನಗಂಡ ಶಿಕ್ಷಣ ಇಲಾಖೆ ಕೃಪಾಂಕಗಳ ನಿಯಮಗಳನ್ನು ಬದಲಾಯಿಸಿ, 1.69 ಲಕ್ಷ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಿತ್ತು.
ಕೃಪಾಂಕ ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳು ಹಾಗೂ ಅನುತ್ತೀರ್ಣರಾದ 2.28 ಲಕ್ಷ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಎರಡನೇ ಪರೀಕ್ಷೆಗೆ ಸಿದ್ಧಗೊಳಿಸಲು ರಾಜ್ಯ ಪಠ್ಯಕ್ರಮ ಅನುಸರಿಸುವ ಎಲ್ಲ ಪ್ರೌಢಶಾಲೆಗಳಲ್ಲೂ ಮೇ 15ರಿಂದ ಜೂನ್ 5ರವರೆಗೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಜೂನ್ 7ರಿಂದ ಪರೀಕ್ಷೆಗಳು ಆರಂಭವಾಗಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.