ADVERTISEMENT

ಎಸ್‌ಟಿ ಮೀಸಲಾತಿ ಹೆಚ್ಚಳ ವಿಷಯ ಚರ್ಚೆಯಲ್ಲಿ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 19:32 IST
Last Updated 31 ಅಕ್ಟೋಬರ್ 2020, 19:32 IST

ಬೆಂಗಳೂರು: ‘ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ವಿಷಯ ಚರ್ಚೆಯಲ್ಲಿದೆ.ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಶಾಸಕರ ಭವನದ ವಾಲ್ಮೀಕಿ ತಪೋವನದಲ್ಲಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಶನಿವಾರ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ಕೋವಿಡ್ ಕಾರಣ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲಾಗಿದೆ. ಮುಂದಿನ ದಿನಗಳಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದರು.

‘ಸಮುದಾಯದ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 3.5ರಿಂದ ಶೇ 7ಕ್ಕೆ ಮೀಸಲಾತಿ ಹೆಚ್ಚಿಸಬೇಕಿದೆ. ಸದ್ಯ ಉಪಚುನಾವಣೆಯ ನೀತಿ-ಸಂಹಿತೆ ಜಾರಿಯಲ್ಲಿರುವುದರಿಂದ ನ. 10ರ ನಂತರ ಮುಖ್ಯಮಂತ್ರಿ ಜೊತೆ ಈ ಬಗ್ಗೆ ಚರ್ಚಿಸಿ, ಮೀಸಲಾತಿ ಹೆಚ್ಚಿಸುವುದಾಗಿ ಸಚಿವ ಬಿ. ಶ್ರೀರಾಮುಲು ಭರವಸೆ ನೀಡಿದ್ದಾರೆ’ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.ಅದಕ್ಕೆ ಪ್ರತಿಕ್ರಿಯಿಸಿದ ಶ್ರೀರಾಮುಲು, ‘ಸರ್ಕಾರ ನೀಡಿರುವ ಭರವಸೆಯನ್ನು ಉಳಿಸಿಕೊಳ್ಳಲಿದೆ. ನೀತಿ-ಸಂಹಿತೆ ಕಾರಣ ಈಗ ಘೋಷಣೆ ಮಾಡುವಂತಿಲ್ಲ’ ಎಂದರು.

ADVERTISEMENT

ವಾಲ್ಮೀಕಿ ಪ್ರಶಸ್ತಿಗೆ ನಾಲ್ವರ ಆಯ್ಕೆ: ವಾಲ್ಮೀಕಿ ಪ್ರಶಸ್ತಿಗೆ ಡಾ.ಕೆ.ಆರ್. ಪಾಟೀಲ, ಬಿ.ಎಲ್. ವೇಣು, ಗೌರಿಪುರದ ಮಾರಪ್ಪನಾಯಕ ಮತ್ತು ತಿಪ್ಪೇಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.

ಕಾರ್ಯಕ್ರಮ ಮುಗಿಸಿ ಮುಖ್ಯಮಂತ್ರಿ ತೆರಳಿದ ಬಳಿಕ, ವಾಲ್ಮೀಕಿ ಪ್ರತಿಮೆ ಎದುರು ನಿಂತು ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಸಮುದಾಯದ ಜನರು ಘೋಷಣೆ ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.