ADVERTISEMENT

ಕಾಲ್ತುಳಿತ ಘಟನೆ: ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ವರದಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2025, 15:59 IST
Last Updated 12 ಜೂನ್ 2025, 15:59 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಬಗೆಗಿನ ವಿಚಾರಣೆ ಮತ್ತು ಈ ತನಕದ ವಸ್ತುಸ್ಥಿತಿ ವರದಿಯನ್ನು ರಾಜ್ಯ ಸರ್ಕಾರವು, ಮುಚ್ಚಿದ ಲಕೋಟೆಯಲ್ಲಿ ಗುರುವಾರ ಹೈಕೋರ್ಟ್‌ಗೆ ಸಲ್ಲಿಸಿತು.

ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ ಶೆಟ್ಟಿ ಅವರು, ಘಟನೆಗೆ ಸಂಬಂಧಿಸಿದಂತೆ ನ್ಯಾಯಪೀಠ ಈ ಹಿಂದಿನ ವಿಚಾರಣೆ ವೇಳೆ ಕೇಳಿದ್ದ 9 ಪ್ರಶ್ನೆಗಳಿಗೆ ಉತ್ತರ ನೀಡಿದ ಸರಿಸುಮಾರು 300 ಪುಟಗಳ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು. ‘ಎಲ್ಲಾ ದಾಖಲೆಗಳು ಕನ್ನಡದಲ್ಲಿವೆ. ಅವುಗಳನ್ನು ಎರಡು ದಿನಗಳಲ್ಲಿ ಇಂಗ್ಲಿಷ್‌ಗೆ ಅನುವಾದಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

‘ಈ ವಿಷಯದಲ್ಲಿ ಸರ್ಕಾರ ಏನನ್ನೂ ಬಚ್ಚಿಡುವುದಿಲ್ಲ. ಭವಿಷ್ಯದಲ್ಲಿ ಇಂತಹ ದುರ್ಘಟನೆಗಳು ಸಂಭವಿಸದಂತೆ ಹೇಗೆ ತಡೆಯಬಹುದು ಎಂಬ ವಿಚಾರದಲ್ಲಿ ಸಂಪೂರ್ಣ ಪಾರದರ್ಶಕ ನಡೆ ಹೊಂದಿದೆ’ ಎಂದರು.

ನಿರ್ದೇಶನ: ‘ದುರಂತಕ್ಕೆ ಸಂಬಂಧಿಸಿದ ಎಲ್ಲಾ ಪತ್ರ ವ್ಯವಹಾರ, ಸಂವಹನಗಳನ್ನು (ಆಫ್‌ಲೈನ್‌ ಮತ್ತು ಆನ್‌ಲೈನ್‌, ವಾಟ್ಸ್‌ ಆ್ಯಪ್‌ ಸಂದೇಶವೂ ಸೇರಿದಂತೆ) ಮುಖ್ಯ ಕಾರ್ಯದರ್ಶಿ ವಶಕ್ಕೆ ಒಪ್ಪಿಸಬೇಕು. ಜಿಲ್ಲಾಧಿಕಾರಿ ನೇತೃತ್ವದ ಮ್ಯಾಜಿಸ್ಟೀರಿಯಲ್ ವಿಚಾರಣೆ ಮತ್ತು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹ ಅವರ ಏಕಸದಸ್ಯ ವಿಚಾರಣಾ ಆಯೋಗ, ಯಾವ ನಿರ್ದಿಷ್ಟ ಉದ್ದೇಶವನ್ನು ವಹಿಸಿಕೊಂಡು ಯಾವುದರ ಬಗ್ಗೆ ವಿಚಾರಣೆ ನಡೆಸಬೇಕು ಎಂಬ (ಟರ್ಮ್ಸ್‌ ಅಂಡ್‌ ರೆಫರೆನ್ಸಸ್‌) ಉಲ್ಲೇಖನಾ ನಿಯಮಗಳನ್ನು ಹೊಂದಿವೆ ಎಂಬುದನ್ನೂ ಇದರಲ್ಲಿ ಅಡಕಗೊಳಿಸಬೇಕು’ ಎಂದು ನ್ಯಾಯಪೀಠ ಸರ್ಕಾರಕ್ಕೆ ನಿರ್ದೇಶಿಸಿದೆ.

ಮಧ್ಯಂತರ ಅರ್ಜಿಗಳು: ಇದೇ ವೇಳೆ ಪದಾಂಕಿತ ಹಿರಿಯ ವಕೀಲ ಎಂ.ಬಿ.ನರಗುಂದ ಅವರು, ‘ಕೋವಿಡ್‌ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ಆಮ್ಲಜನಕ ಕೊರತೆಯಿಂದ ಸಾಕಷ್ಟು ಮಂದಿ ಮೃತಪಟ್ಟಿದ್ದರು. ಈ ಘಟನೆಯ‌ ಮೇಲೆ ಹೈಕೋರ್ಟ್‌ ನಿಗಾ ಇಟ್ಟಿತ್ತು. ಈ ಪ್ರಕರಣದಲ್ಲೂ ಅದೇ ರೀತಿ ಮಾಡಬೇಕು’ ಎಂದು ಸಲಹೆ ನೀಡಿದರು.

ಮಧ್ಯಂತರ ಅರ್ಜಿದಾರರಾಗಲು ಬಯಸಿರುವ ವಿಧಾನ ಪರಿಷತ್‌ ಮಾಜಿ ಸದಸ್ಯ ಮೋಹನ್‌ ಕೊಂಡಜ್ಜಿ ಪರ ಪದಾಂಕಿತ ಹಿರಿಯ ವಕೀಲ ಕೆ.ದಿವಾಕರ್‌, ‘ರಾಜ್ಯದಲ್ಲಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ (ಎನ್‌ಡಿಆರ್‌ಎಫ್‌) ಮಾರ್ಗಸೂಚಿಗಳನ್ನು 2014ರಿಂದಲೂ ಪಾಲನೆ ಮಾಡಲಾಗುತ್ತಿಲ್ಲ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಇದೇ ವೇಳೆ ನ್ಯಾಯಪೀಠ, ‘ಮಧ್ಯಂತರ ಅರ್ಜಿದಾರರಾಗಲು ಬಯಸಿರುವವರ ಬಗ್ಗೆ ಈ ಹಂತದಲ್ಲಿ ಯಾವುದೇ ತೀರ್ಮಾನ ಪ್ರಕಟಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿತು. ಪ್ರಕರಣದಲ್ಲಿ ಮಧ್ಯಂತರ ಅರ್ಜಿದಾರರಾಗಲು ಬಯಸಿದ್ದವರ ಪರ ಹೈಕೋರ್ಟ್‌ ವಕೀಲರಾದ ಜಿ.ಆರ್.ಮೋಹನ್, ಎನ್‌.ಪಿ.ಅಮೃತೇಶ್‌, ರಂಗನಾಥ ರೆಡ್ಡಿ ಇದ್ದರು.  

ನಾಲ್ವರ ಬಿಡುಗಡೆಗೆ ಆದೇಶ

ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಆರ್‌ಸಿಬಿ ಮತ್ತು ಡಿಎನ್‌ಎ ಕಂಪನಿಯ ನಾಲ್ವರು ಪದಾಧಿಕಾರಿಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ.

‘ನಮ್ಮನ್ನು ಬಿಡುಗಡೆ ಮಾಡಬೇಕು’ ಎಂದು ಕೋರಿ ಆರ್‌ಸಿಬಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್‌ ಸೋಸಲೆ ಮೆಸರ್ಸ್‌ ಡಿಎನ್‌ಎ ಎಂಟರ್‌ಟೈನ್ಮೆಂಟ್‌ ನೆಟ್‌ವರ್ಕ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿ ನಿರ್ದೇಶಕ ಆರ್‌.ಸುನಿಲ್‌ ಮ್ಯಾಥ್ಯೂ ಎಸ್‌.ಕಿರಣ್‌ ಕುಮಾರ್‌ ಮತ್ತು ಎನ್‌.ಪಿ.ಶಮಂತ್‌ ಮಾವಿನಕೆರೆ ಸಲ್ಲಿಸಿದ್ದ ರಿಟ್‌ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಮಧ್ಯಂತರ ಜಾಮೀನು ಆದೇಶವನ್ನು ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಪ್ರಕಟಿಸಿತು.

ಷರತ್ತುಗಳು: ‘ಅರ್ಜಿದಾರರು ತಲಾ ₹1 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್‌ ಮತ್ತು ಇಬ್ಬರ ಭದ್ರತೆ ಒದಗಿಸಬೇಕು. ಬಿಡುಗಡೆಯಾದ ಎರಡು ವಾರಗಳಲ್ಲಿ ತಮ್ಮ ಪಾಸ್‌ಪೋರ್ಟ್‌ಗಳನ್ನು ವಿಚಾರಣಾ ನ್ಯಾಯಾಲಯದ ವಶಕ್ಕೆ ಒಪ್ಪಿಸಬೇಕು. ನ್ಯಾಯಾಲಯದ ಅನುಮತಿ ಇಲ್ಲದೇ ಹೊರ ಹೋಗುವಂತಿಲ್ಲ. ಸಾಕ್ಷಿಗಳಿಗೆ ಪ್ರತ್ಯಕ್ಷ ಅಥವಾ ಪರೋಕ್ಷ ಬೆದರಿಕೆ ಹಾಕಬಾರದು. ಸಾಕ್ಷ್ಯಗಳನ್ನು ತಿರುಚಬಾರದು. ಮ್ಯಾಜಿಸ್ಟೀರಿಯಲ್‌ ಅಥವಾ ನ್ಯಾಯಾಂಗ ಆಯೋಗದ ವಿಚಾರಣೆಗೆ ಅರ್ಜಿದಾರರು ಸಹಕರಿಸಬೇಕು’ ಎಂದು ನ್ಯಾಯಪೀಠ ಷರತ್ತು ವಿಧಿಸಿದೆ. ‘ನಮ್ಮ ಬಂಧನ ಅಕ್ರಮ ಮತ್ತು ಕಾನೂನು ಬಾಹಿರ. ಕೂಡಲೇ ನಮ್ಮನ್ನು ಬಿಡುಗಡೆ ಮಾಡುವ ಮೂಲಕ ಮಧ್ಯಂತರ ಪರಿಹಾರ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.